ಅಪರಾಧ

ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ; ಕೈದಿಗಳ ಪರಾರಿ ಪ್ರಕರಣದ ಪರಿಶೀಲನೆ

ಮೂರು ಕೈದಿಗಳ ಪರಾರಿ ಘಟನೆ ಬಳಿಕ ಭದ್ರತಾ ವ್ಯವಸ್ಥೆ ಪರಿಶೀಲನೆ; ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆ ಪ್ರಗತಿ ಅವಲೋಕನ

ಕಲಬುರಗಿ, ಜು.31: ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರಾಗೃಹಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿದರು. ಬಳಿಕ ಅವರು ಕಾರಾಗೃಹದ ಒಳಭಾಗಕ್ಕೆ ತೆರಳಿ ಪರಾರಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಜೈಲಿನ ಭದ್ರತಾ ವ್ಯವಸ್ಥೆ, ಆಡಳಿತ ಹಾಗೂ ಕೈದಿಗಳ ಮೇಲ್ವಿಚಾರಣೆಗೆ ಸಂಬಂಧಿಸಿದ ಅಂಶಗಳನ್ನು ಪರಿಶೀಲಿಸಿ ತನಿಖೆಯ ಪ್ರಗತಿಯ ಕುರಿತು ಮಾಹಿತಿ ಪಡೆದರು.

ಮೂರು ಕೈದಿಗಳು ಪರಾರಿಯಾದ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಲಾಗಿದ್ದು, ಮತ್ತೋರ್ವ ಕೈದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಘಟನೆ ಹಿನ್ನೆಲೆಯಲ್ಲಿ ಜೈಲಿನ ಭದ್ರತೆ ಹಾಗೂ ಆಡಳಿತ ವೈಫಲ್ಯದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಈಗಾಗಲೇ ಕಾರಾಗೃಹದ ಅಧೀಕ್ಷಕರು ಸೇರಿದಂತೆ ಕೆಲವು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಈ ಬೆಳವಣಿಗೆಗಳ ನಡುವೆಯೇ ಎಡಿಜಿಪಿ ಅಲೋಕ್ ಕುಮಾರ್ ಅವರ ಭೇಟಿ ಮಹತ್ವ ಪಡೆದಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button