ಗರ್ಭಧಾರಣೆ ಪೂರ್ವ ಆರೈಕೆ ತರಬೇತಿಗೆ ಚಾಲನೆ: ತಾಯಿ-ಮಗು ಆರೋಗ್ಯ ಸುಧಾರಣೆಗೆ ಮಹತ್ವದ ಹೆಜ್ಜೆ
ಜಿಲ್ಲಾ ಆರೋಗ್ಯ ಇಲಾಖೆ–ಜೆಎಚ್ಪಿಐಇಜಿಒ ಸಹಯೋಗದಲ್ಲಿ ತರಬೇತಿ; ಅಫಜಲಪುರದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಯೋಜನೆ ಜಾರಿ.

ಕಲಬುರಗಿ, ಜು. 31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜೆಎಚ್ಪಿಐಇಜಿಒ (Jhpiego) ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರದ ಮೊದಲನೇ ಮಹಡಿಯ ಸಭಾಂಗಣದಲ್ಲಿ ‘ಗರ್ಭಧಾರಣೆ ಪೂರ್ವ ಆರೈಕೆ’ (Pre-Pregnancy Care) ಕುರಿತ ತರಬೇತಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡಿ ಸಮಗ್ರ ಆರೋಗ್ಯ ಅಭಿವೃದ್ಧಿಯ ಗುರಿ ಸಾಧಿಸಲು ಗರ್ಭಧಾರಣೆ ಪೂರ್ವ ಆರೈಕೆ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಝಾಫಿಗೋ (Jhpiego) ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ (AAK) ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಗರ್ಭಧಾರಣೆಗೆ ಮುನ್ನವೇ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಿಗೆ ಸೂಕ್ತ ಆರೋಗ್ಯ ತಪಾಸಣೆ, ಪೌಷ್ಟಿಕಾಂಶ, ಆರೋಗ್ಯ ಜಾಗೃತಿ ಹಾಗೂ ಸಲಹೆಗಳನ್ನು ನೀಡುವ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಉತ್ತಮಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಕ್ಕಳ ಆರೋಗ್ಯ ಸುಧಾರಣೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ ಸಿಬ್ಬಂದಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಕೇಶ್ ಕಾಂಬಳೆ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರು ಹಾಗೂ ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ರವಿಕಾಂತಿ ಕ್ಯಾತನಾಳ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂತೋಷ ಅಲಗೂರ, ಅಫಜಲಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಚೇತನ್ ಧುಮಾಲೆ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ರವೀಂದ್ರ ಠಾಕೂರ್, ಜಿಲ್ಲಾ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಾಧಿಕಾರಿ ವಿಶ್ವನಾಥ ಸಣ್ಣೂರ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.
ಜೆಎಚ್ಪಿಐಇಜಿಒ ತಂಡದ ಕರ್ನಾಟಕ ರಾಜ್ಯ ವ್ಯವಸ್ಥಾಪಕ ಅರವಿಂದ ಮಸಳಿ, ಹಿರಿಯ ಕಾರ್ಯಕ್ರಮಾಧಿಕಾರಿಗಳಾದ ಸುನಿಲ್ ಕುಮಾರ (ಬೀದರ್), ಚನ್ನಬಸು ಬಿರಾದರ್ (ಕಲಬುರಗಿ), ಜಿಲ್ಲಾ ಕಾರ್ಯಕ್ರಮ ಸಂಯೋಜಕ ಗ್ಯಾನಪ್ಪ, ತಾಲೂಕು ಸಲಹೆಗಾರ ಸಾಬಪ್ಪ ಸಿ.ಕೆ., ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



