
ಕಲಬುರಗಿ, ಜು. 31: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಅಧ್ಯಕ್ಷ ವಿಜಯಕುಮಾರ ಅಂಕಲಗಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ರೈತರು ಕೃಷಿ ಚಟುವಟಿಕೆ ನಡೆಸಲು ಸಂಕಷ್ಟ ಎದುರಿಸುತ್ತಿದ್ದಾರೆ. ಅನೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಮೊದಲ ಆದ್ಯತೆಯಾಗಿ ಕರ್ನಾಟಕದ ರೈತರ ಬೆಳೆಗಳಿಗೆ ಹಾಗೂ ಜನರ ಕುಡಿಯುವ ನೀರಿನ ಅಗತ್ಯಕ್ಕೆ ನೀರನ್ನು ಮೀಸಲಿಡಬೇಕು. ಬೆಂಗಳೂರಿನ ಸೇರಿದಂತೆ ಕಾವೇರಿ ನೀರನ್ನೇ ಅವಲಂಬಿಸಿರುವ ಜಿಲ್ಲೆಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿಜಯಕುಮಾರ ಅಂಕಲಗಿ ಎಚ್ಚರಿಕೆ ನೀಡಿದರು.



