ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಡಿಎಸ್ಎಸ್ ಆಗ್ರಹ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ರಾಜ್ಯ ಸಂಚಾಲಕ ಅರ್ಜುನ್ ಭದ್ರೆ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಕುಗ್ಗಿಸಿದ್ದು, ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರು, ನೇಮಕಾತಿ ಮಾಡಿದ ಅಧಿಕಾರಿಗಳು ಹಾಗೂ ಸೋರಿಕೆಗೆ ಕಾರಣರಾದ ಎಲ್ಲರ ಪಾತ್ರದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಯಾರ ಪಾತ್ರವಿದೆ, ಯಾರ ಶಿಫಾರಸಿನ ಮೇರೆಗೆ ನೇಮಕಾತಿ ನಡೆದಿದೆ ಹಾಗೂ ಈ ಪ್ರಕರಣದ ಹಿಂದಿರುವ ಜಾಲ ಯಾವುದು ಎಂಬುದನ್ನು ಬಹಿರಂಗಪಡಿಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ನಡೆಸಬೇಕು ಎಂದು ಅವರು ಹೇಳಿದರು.
ನೀಟ್ ಪರೀಕ್ಷೆಯಂತಹ ಮಹತ್ವದ ಪರೀಕ್ಷೆಯಲ್ಲಿ ನಡೆದಿರುವ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಪಾವಿತ್ರ್ಯಕ್ಕೆ ಕಳಂಕ ತಂದಿರುವ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಲು ಸರ್ಕಾರ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಜ್ಞಾನಿ ಸೋನಂ ವಾಂಗ್ಚುಕ್ ಅವರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಉಲ್ಲೇಖಿಸಿದ ಅರ್ಜುನ್ ಭದ್ರೆ, ಸುಮಾರು 19 ದಿನಗಳ ಕಾಲ ಶಾಂತಿಯುತ ಪ್ರತಿಭಟನೆ ನಡೆಸಿದರೂ ಸರ್ಕಾರ ಸ್ಪಂದಿಸದೇ, ಅವರ ವಿರುದ್ಧ ಕೈಗೊಂಡ ಕ್ರಮ ಖಂಡನೀಯ ಎಂದು ಹೇಳಿದರು.
ಸೋನಂ ವಾಂಗ್ಚುಕ್ ಅವರ ಧ್ವನಿಗೆ ದೇಶದ ಯುವಕರು ಬೆಂಬಲ ನೀಡಬೇಕು. ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ್ ಆಜಾದ್ಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



