ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಸಿಪಿಐ(ಎಂ) ಒತ್ತಾಯ
ಬರ ಪರಿಹಾರ ಕಾಮಗಾರಿ, ಉದ್ಯೋಗ ಖಾತರಿ ವಿಸ್ತರಣೆ ಹಾಗೂ ರೈತರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಜಿಲ್ಲಾ ಮುಖಂಡ ವಿರುಪಾಕ್ಷಪ್ಪ ತಡಕಲ್ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣವಾಗಿದೆ. ಜನರು ಹಾಗೂ ಜಾನುವಾರುಗಳು ಸಂಕಷ್ಟ ಎದುರಿಸುತ್ತಿರುವುದರಿಂದ ಸರ್ಕಾರ ವಿಳಂಬ ಮಾಡದೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಉದ್ಯೋಗ ಖಾತರಿ ಯೋಜನೆಯನ್ನು 200 ದಿನಗಳಿಗೆ ವಿಸ್ತರಿಸಬೇಕು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತುರ್ತಾಗಿ ಉದ್ಯೋಗ ಸೃಷ್ಟಿಸುವ ಕಾಮಗಾರಿಗಳನ್ನು ಆರಂಭಿಸಬೇಕು. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೆ ಉದ್ಯೋಗ ಒದಗಿಸಿ, ಬಾಕಿ ಇರುವ ಕೂಲಿಯನ್ನು ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿ ಹಾಗೂ ಜನಜೀವನ ಸುಧಾರಣೆಗೆ ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು. ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಜಾರಿಗೊಳಿಸಬೇಕು ಎಂದು ಅವರು ಹೇಳಿದರು.
ಬರದಿಂದ ತತ್ತರಿಸಿರುವ ರೈತರಿಗೆ ಸರ್ಕಾರ ಉಚಿತ ಬೀಜ, ರಸಗೊಬ್ಬರ ಹಾಗೂ ಅಗತ್ಯ ಕೃಷಿ ಪರಿಕರಗಳನ್ನು ಒದಗಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಧನ ನೀಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡುವಂತೆ ಅವರು ಆಗ್ರಹಿಸಿದರು.
ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಮೇವು ಬ್ಯಾಂಕ್ ಸ್ಥಾಪಿಸಿ, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ನಿಧಿಗಳಿಂದ ಅಗತ್ಯ ಅನುದಾನ ಬಿಡುಗಡೆ ಮಾಡಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಬರ ಪರಿಸ್ಥಿತಿಯಿಂದ ವಲಸೆ ತಡೆಯಲು ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಾಬುರಾವ್ ಹಿರಂಶೆಟ್ಟಿ, ಪಾಂಡುರಂಗ ಮಾವಿನಕರ್, ಮೈಬೂಬ್ ಶಾ ಕುರಿಕೋಟಾ, ರಾಮಣ್ಣ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



