ಆಗಸ್ಟ್ 6ರಿಂದ 15ರವರೆಗೆ ಸಿಪಿಐ ಪಾದಯಾತ್ರೆ; ಬದಲಾವಣೆಗೆ ಜನಾಂದೋಲನಕ್ಕೆ ಕರೆ
ಕಲಬುರಗಿ ಜಿಲ್ಲೆಯ ಮೂರು ತಾಲ್ಲೂಕುಗಳ 100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸಂಚಾರ; ಜನಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

ಕಲಬುರಗಿ, ಆ.2: “ಬದಲಾವಣೆ ಅಗತ್ಯ” ಎಂಬ ಘೋಷಣೆಯೊಂದಿಗೆ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ಆಗಸ್ಟ್ 6ರಿಂದ 15ರವರೆಗೆ ಕಲಬುರಗಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ್ ರಾಠೋಡ್ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಜನರ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕಾಗಿ ಪಕ್ಷದ ವತಿಯಿಂದ ಪಾದಯಾತ್ರೆಗಳನ್ನು ಆಯೋಜಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸುಮಾರು 100 ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ ಜನರ ಅಹವಾಲುಗಳನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.
ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರಗಳು ಜನರ ಮೂಲಭೂತ ಸಮಸ್ಯೆಗಳ ಪರಿಹಾರದಲ್ಲಿ ವಿಫಲವಾಗಿವೆ. ಸ್ವಾತಂತ್ರ್ಯ ಹೋರಾಟಗಾರರ ಆಶಯಗಳು ಮತ್ತು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಜನರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್, ವಿಮೆ, ಸಾರಿಗೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಗ್ರ ಬದಲಾವಣೆ ಅಗತ್ಯವಿದೆ. ಚುನಾವಣಾ ವ್ಯವಸ್ಥೆಯಲ್ಲಿ ಹಣದ ಪ್ರಭಾವ ಕಡಿಮೆಯಾಗಬೇಕು ಹಾಗೂ ಮತದಾರರ ಇಚ್ಛೆಗೆ ತಕ್ಕಂತೆ ಪ್ರಾತಿನಿಧ್ಯ ದೊರೆಯುವ ವ್ಯವಸ್ಥೆ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.
ಆಗಸ್ಟ್ 6ರಂದು ಜಿಲ್ಲೆಯ ಮೂರು ತಾಲ್ಲೂಕುಗಳ ಮೂರು ಗ್ರಾಮಗಳಿಂದ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ನಂತರ ನಿರಂತರವಾಗಿ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಿತ ಇಲಾಖೆಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಸಾರ್ವಜನಿಕ ಶೌಚಾಲಯ, ಶಾಲೆ, ಆರೋಗ್ಯ ಸೌಲಭ್ಯ, ಬಸ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ಬರಪೀಡಿತ ಪ್ರದೇಶಗಳಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತರಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ವಸತಿ ರಹಿತರಿಗೆ ಮನೆ, ನಿವೇಶನ ಕಲ್ಪಿಸಬೇಕು. ಕಳೆದ ನಾಲ್ಕೈದು ತಿಂಗಳಿಂದ ಬಾಕಿ ಉಳಿದಿರುವ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಗಳನ್ನು ತಕ್ಷಣ ಬಿಡುಗಡೆ ಮಾಡಿ, ಪಿಂಚಣಿ ಮೊತ್ತವನ್ನು ಕನಿಷ್ಠ ₹3,000ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆ, ಶಾಲೆ-ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಜೊತೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಭುದೇವ ಯಳಸಂಗಿ, ಸಿದ್ದಪ್ಪ ಪಲ್ಕಿ, ಭೀಮಾಶಂಕರ ಮಾಡಿಯಾಳ್, ಸಾಜಿದ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



