ಆಗಸ್ಟ್ 9ರಂದು ಕಲಬುರಗಿಯಲ್ಲಿ ಬಂಜಾರಾ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಆಗಸ್ಟ್ 15ರಂದು ಪ್ರತಿಭಾ ಪುರಸ್ಕಾರ, ನಿವೃತ್ತ ಹಾಗೂ ಸಾಧಕರಿಗೆ ಸನ್ಮಾನ; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕಲಬುರಗಿ, ಆ.2: ಬಂಜಾರಾ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಆಗಸ್ಟ್ 9ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹರಿಶ್ಚಂದ್ರ ಎಸ್. ರಾಠೋಡ್ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರಾ ಸಮುದಾಯದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು, ಮಹಿಳಾ ನೌಕರರು ಹಾಗೂ ಅವರ ಮಕ್ಕಳಿಗಾಗಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತರು ಸಂಘದ ಸಂಯೋಜಕರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ನಿವೃತ್ತ ನೌಕರರು, ಹೊಸದಾಗಿ ಸರ್ಕಾರಿ ಸೇವೆಗೆ ಸೇರ್ಪಡೆಯಾದವರು, ಬಡ್ತಿ ಪಡೆದ ನೌಕರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವ್ಯಕ್ತಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಶಿಕ್ಷಣದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.
ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ದೃಢೀಕೃತ ಪ್ರತಿಯನ್ನು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 12ರೊಳಗೆ ಸಂಘದ ಸಂಯೋಜಕರಿಗೆ ಸಲ್ಲಿಸಬೇಕು. ಸಂಬಂಧಿತ ತಾಲ್ಲೂಕು ಸಂಘದ ಪದಾಧಿಕಾರಿಗಳ ಮೂಲಕ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಸಂಘವು ಸ್ಥಾಪನೆಯಾದ ದಿನದಿಂದಲೂ ಬಂಜಾರಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಇದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸುವುದು, ಸಮಾಜದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅವುಗಳ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳನ್ನು ಕೈಗೊಳ್ಳುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ಹರಿಶ್ಚಂದ್ರ ಎಸ್. ರಾಠೋಡ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಪ್ರೇಮಸಿಂಗ್ ಚವ್ಹಾಣ್, ಬಾಬು ಎಂ. ಜಾಧವ್, ಸತೀಶ್ ರಾಮಚಂದ್ರ ಚವ್ಹಾಣ್, ಪ್ರಭು ಜಾಧವ್, ರವಿ ನಾಯಕ್, ಭಿಕ್ಕುಸಿಂಗ್ ರಾಠೋಡ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.



