ಜಿಲ್ಲಾಸುದ್ದಿಶಿಕ್ಷಣ

ಕರ್ಜಗಿ ವಸತಿ ಶಾಲೆ ಆಹಾರ ವಿಷ ಪ್ರಕರಣ; ಪ್ರಾಂಶುಪಾಲ ಮತ್ತು ವಾರ್ಡನ್ ಅಮಾನತು

55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಕಠಿಣ ಕ್ರಮ; ಇಲಾಖಾ ತನಿಖೆಗೆ ಆದೇಶ

ಕಲಬುರಗಿ, ಆ.2: ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವನೆಯಿಂದ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ ಹಾಗೂ ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ. (ಕೆಎಎಸ್) ಆದೇಶ ಹೊರಡಿಸಿದ್ದು, ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ಹಾಗೂ ಆಹಾರದ ಗುಣಮಟ್ಟ ಕಾಪಾಡುವುದು ಸಂಬಂಧಪಟ್ಟ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದೇ ವೇಳೆ 55 ವಿದ್ಯಾರ್ಥಿಗಳು ಅಸ್ವಸ್ಥರಾಗುವಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಾಥಮಿಕ ಪರಿಶೀಲನೆಯಲ್ಲಿಯೇ ಕರ್ತವ್ಯ ನಿರ್ಲಕ್ಷ್ಯದ ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಕ್ರಮ ಜಾರಿಗೊಳಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ನಿಯಮಗಳು-2025ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಅವರು ಈಗಾಗಲೇ ಶಾಲೆಯ ಅಡುಗೆ ಸಹಾಯಕರನ್ನು ಅಮಾನತುಗೊಳಿಸಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಸಮಗ್ರ ತನಿಖೆ ಮುಂದುವರಿದಿದೆ.

Related Articles

Leave a Reply

Your email address will not be published. Required fields are marked *

Back to top button