ಆರೋಗ್ಯ

ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ: ಡಾ. ರವೀಂದ್ರನಾಥ ಮೇಟಿ

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ; ಅತ್ಯುತ್ತಮ ಸೇವೆ ಸಲ್ಲಿಸಿದ ವೈದ್ಯರಿಗೆ ಸನ್ಮಾನ

ಕಲಬುರಗಿ, ಆ.2: ವೈದ್ಯರ ಸೇವೆ ಸಮಾಜಕ್ಕೆ ಅತ್ಯಂತ ಅಮೂಲ್ಯವಾಗಿದ್ದು, ವೈದ್ಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆಯ ಮಹತ್ತರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಬೆಂಗಳೂರಿನ ಉಪನಿರ್ದೇಶಕ ಡಾ. ರವೀಂದ್ರನಾಥ ಮೇಟಿ ಹೇಳಿದರು.

ನಗರದ ಸಾಯಿ ಮಂದಿರ ಸಮೀಪದ ವಿ.ಎಲ್. ಪಾಟೀಲ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ವೈದ್ಯರು ಗ್ರಾಮೀಣ ಪ್ರದೇಶ ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಮೂಲಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದಾರೆ. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅನನ್ಯವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗೀಯ ಉಪನಿರ್ದೇಶಕ ಹಾಗೂ ಜಿಲ್ಲಾ ಅಧ್ಯಕ್ಷ ಡಾ. ಶರಣಬಸಪ್ಪ ಗಂಜಲಖೇಡ ಮಾತನಾಡಿ, ಸಂಘದ ಸದಸ್ಯರ ಏಕತೆ, ವೈದ್ಯರ ವೃತ್ತಿಪರ ಬೆಳವಣಿಗೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ವಿಭಾಗೀಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಆಸ್ಪತ್ರೆಯ ಆರ್‌ಎಂಒ ಡಾ. ನಾಗರಾಜ ಪಾಟೀಲ ವಿಶೇಷವಾಗಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹನಿರ್ದೇಶಕ ಡಾ. ಶಂಕರಪ್ಪ, ಜಿಲ್ಲಾ ಗೌರವಾಧ್ಯಕ್ಷ ಹಾಗೂ ವಿಭಾಗೀಯ ಉಪನಿರ್ದೇಶಕ ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರುಕಯ್ಯ ಅಸ್ನಾ ರಬ್ಬಾ ಹಾಗೂ ಹಿರಿಯ ಶಸ್ತ್ರಚಿಕಿತ್ಸಕ ಡಾ. ರಾಜಶೇಖರ ಮಾಳಿ ಉಪಸ್ಥಿತರಿದ್ದು ವೈದ್ಯರ ಸೇವೆಯನ್ನು ಶ್ಲಾಘಿಸಿದರು.

ವಿಶೇಷ ಆಹ್ವಾನಿತರಾಗಿ ರಾಜ್ಯ ಉಪಾಧ್ಯಕ್ಷ ಡಾ. ಮೋಹನ್, ವಿಭಾಗೀಯ ಜಂಟಿ ಕಾರ್ಯದರ್ಶಿ ಡಾ. ರುದ್ರಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಸತೀಶ್, ಆಂತರಿಕ ಲೆಕ್ಕ ಪರಿಶೋಧಕಿ ಡಾ. ಶೋಭಾ ಟಿ.ಆರ್., ಸಂಘದ ವ್ಯವಸ್ಥಾಪಕ ಕೃಷ್ಣಪ್ಪ, ಶ್ರೀ ಆಸ್ಪತ್ರೆಯ ಡಾ. ಸಚಿನ್, ಡಾ. ಶ್ವೇತಾ, ವಿ.ಎಲ್. ಪಾಟೀಲ ಆಸ್ಪತ್ರೆಯ ಡಾ. ರವೀಂದ್ರ ಪಾಟೀಲ, ಸಂಜನಾ ಆಸ್ಪತ್ರೆಯ ಡಾ. ಅಂಬರಪ್ಪ ಜಂಪಾ, ಶಾರದಾಂಬೆ ಆಸ್ಪತ್ರೆಯ ಡಾ. ಗಿರೀಶ್ ಸ್ವಾಮಿ ಹಾಗೂ ಡಾ. ದೀಪಾ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವೈದ್ಯರು, ನಿವೃತ್ತ ವೈದ್ಯರು, ವೈದ್ಯರ ಪ್ರತಿಭಾವಂತ ಮಕ್ಕಳು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವೈದ್ಯರನ್ನು ಸನ್ಮಾನಿಸಲಾಯಿತು. ಬಳಿಕ ವೈದ್ಯರು ಹಾಗೂ ಅವರ ಕುಟುಂಬ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಮಾರಂಭಕ್ಕೆ ಮತ್ತಷ್ಟು ಮೆರುಗು ದೊರೆಯಿತು.

Related Articles

Leave a Reply

Your email address will not be published. Required fields are marked *

Back to top button