ರಾಜಕೀಯ

ಡಾ. ಅಜಯಸಿಂಗ್‌ಗೆ ಸಚಿವ ಸ್ಥಾನ: ಅಲ್ಲಮಪ್ರಭು ಪಾಟೀಲ ಹರ್ಷ

ಕಾಂಗ್ರೆಸ್ ವರಿಷ್ಠರ ನಿರ್ಧಾರಕ್ಕೆ ಸ್ವಾಗತ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಶಕ್ತಿ ಎಂದ ಶಾಸಕ

ಕಲಬುರಗಿ, ಆ.3: ಜೇವರ್ಗಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯಸಿಂಗ್ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಿರುವ ಕಾಂಗ್ರೆಸ್ ವರಿಷ್ಠರ ನಿರ್ಧಾರವನ್ನು ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿರುವುದು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿದ್ದು, ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ನಿರ್ಧಾರ ಕೈಗೊಂಡ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಅಲ್ಲಮಪ್ರಭು ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

ಡಾ. ಅಜಯಸಿಂಗ್ ಅವರ ಸಚಿವ ಸ್ಥಾನದಿಂದ ಕಲಬುರಗಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button