ನಾಲವಾರ ಕಸಾಪದಿಂದ ಎಸ್‌ಎಸ್‌ಎಲ್‌ಸಿ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಮಕ್ಕಳ ಕವಿಗೋಷ್ಠಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗೆ ಉತ್ತೇಜನ

ಚಿತ್ತಾಪುರ, ಆ.2: ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ನಾಡಗೀತೆ ಮತ್ತು ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ನೆರವೇರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಲವಾರ ಪಶುವೈದ್ಯಾಧಿಕಾರಿ ಡಾ. ಶ್ರೀವಾಣಿ, “ಸಾಧನೆಗಳು ಸಾಧಕರ ಸ್ವತ್ತು, ಸೋಮಾರಿಗಳ ಸ್ವತ್ತಲ್ಲ. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ಧಾಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಜೀವನದಲ್ಲಿ ಗುರಿ ತಲುಪಲು ಸಾಧ್ಯ. ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳು ಮುಂದೆಯೂ ಇನ್ನಷ್ಟು ಸಾಧನೆ ಮಾಡಬೇಕು” ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಪೋಷಕರ ಕನಸುಗಳನ್ನು ನನಸು ಮಾಡಬೇಕು ಎಂದು ಕರೆ ನೀಡಿದರು.
ಕಸಾಪದ ಗೌರವ ಕಾರ್ಯದರ್ಶಿ ಅರುಣಕುಮಾರ ಸುಣಗಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಶ್ರೇಷ್ಠ ಸಾಧನೆ ಮಾಡುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾಗುವ ಗುರಿಗಳನ್ನು ಹೊಂದಿ ಜೀವನದಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಾಲವಾರ ಹೋಬಳಿ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಶ್ರೀ ಕೋರಿಸಿದ್ಧೇಶ್ವರ ಶಿಕ್ಷಣ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಶಿಕ್ಷಣ ಸಂಸ್ಥೆ (ಕೊಲ್ಲೂರು) ಮತ್ತು ತರಕಸಪೇಠ ಶಾಲೆಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮುಂಗಾರು ಮಕ್ಕಳ ಕವಿಗೋಷ್ಠಿಯಲ್ಲಿ ವಿದ್ಯಾರ್ಥಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸುವ ಮೂಲಕ ಸಾಹಿತ್ಯಾಸಕ್ತರ ಮೆಚ್ಚುಗೆ ಗಳಿಸಿದರು. ಇದೇ ವೇಳೆ ಪಲ್ಲವಿ ಸಿದ್ದಪ್ಪ ಅವರು ಭರತನಾಟ್ಯ ಪ್ರದರ್ಶನ ನೀಡಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ ಲೇವಡಿ, ಗೌರವ ಕಾರ್ಯದರ್ಶಿ ಸಿದ್ದುಗೌಡ ಕುರಾಳ (ಸುಗೂರ ಎನ್), ಕಾಂಗ್ರೆಸ್ ಯುವ ಮುಖಂಡ ಸಂತೋಷ ಮಳಭಾ, ಶ್ರೀಧರ ಪತ್ತಾರ, ಹೋಬಳಿ ಘಟಕದ ಕಸಾಪ ಅಧ್ಯಕ್ಷ ರಾಜೇಂದ್ರ ಕೊಲ್ಲೂರು, ಮಹಿಳಾ ಪ್ರತಿನಿಧಿ ಶಿವಲೀಲಾ ತುನ್ನೂರು, ಮಲ್ಲಿಕಾರ್ಜುನ ತಳವಾರ, ನಾಗರಾಜ ಸಾಹು ಇಂಗಳಗಿ, ಶರಣು ಸಾಹು ಮದರಕಿ, ಅನಿಲಕುಮಾರ ವಿಶ್ವಕರ್ಮ, ರವಿ ಮಠದ, ಮಲ್ಲೇಶಿ ಸೊಟ್ಟೆನ್ನರ್, ದೇವು ಪೂಜಾರಿ, ಸಲೀಂ ಮದರಕಿ ಸೇರಿದಂತೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ನೂರಾರು ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.
ವೇದಿಕೆಯಲ್ಲಿದ್ದ ಗಣ್ಯರನ್ನು ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸ್ವಾಗತಿಸಿದರು. ಸೋಮನಾಥ ಕೊಚ್ಚೂರು ಪ್ರಾಸ್ತಾವಿಕವಾಗಿ ಮಾತನಾಡಿ ವಂದನಾರ್ಪಣೆ ಸಲ್ಲಿಸಿದರು. ಕಸಾಪದ ಸಲಹೆಗಾರ ಶಾಂತಕುಮಾರ ಎಣ್ಣಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.



