ಅಪರಾಧಜಿಲ್ಲಾಸುದ್ದಿ

ತೆಲಂಗಾಣ ಗಡಿ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಕ್ರಮಕ್ಕೆ ಆಗ್ರಹ

ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಜೀವ ಬೆದರಿಕೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ

ಕಲಬುರಗಿ, ಆ.4: ತೆಲಂಗಾಣ ಗಡಿ ಭಾಗದ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಈ ಕುರಿತು ದೂರು ನೀಡಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತ ಮುಕ್ತಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಾರುತಿ ಗಂಜಿಗಿರಿ ಆಗ್ರಹಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂಚೋಳಿ ತಾಲೂಕಿನ ಸುಲೇಪೇಟ ಹೋಬಳಿ ವ್ಯಾಪ್ತಿಯ ಯಾಕಾಪೂರ ಗ್ರಾಮದ ಸರ್ವೇ ಸಂಖ್ಯೆ 74 ಹಾಗೂ 76ರ ಸರ್ಕಾರಿ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ತೆಲಂಗಾಣ ರಾಜ್ಯದ ಕೆಲ ವ್ಯಕ್ತಿಗಳು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿರುವುದಲ್ಲದೆ, ಅತಿಯಾದ ಅಗೆತದಿಂದ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಜಾನುವಾರುಗಳು ಬಿದ್ದು ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈ ಕುರಿತು ಜುಲೈ 18ರಂದು ಚಿಂಚೋಳಿ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಈ ವಿಷಯ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರು ತಮ್ಮ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಲೋಕಾಯುಕ್ತರಿಗೆ ಹಲವು ಬಾರಿ ದೂರು ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಂಜಿಗಿರಿ ದೂರಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯ ಪ್ರಕಾರ ಕೆಲವರಿಗೆ ಮಾತ್ರ ಪರವಾನಗಿ ಇದ್ದರೂ, ಅದರ ನೆಪದಲ್ಲಿ ಸುತ್ತಮುತ್ತ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಟಿಪ್ಪರ್ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿದ್ದು, ಧೂಳು ಮತ್ತು ಕಲ್ಲಿನ ಚೂರುಗಳು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ರೈತರಿಗೆ ಅಪಾಯ ಉಂಟುಮಾಡುತ್ತಿವೆ ಎಂದು ಅವರು ಆರೋಪಿಸಿದರು. ಇತ್ತೀಚೆಗೆ ರಟಕಲ್ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಟಿಪ್ಪರ್ ವಾಹನದಿಂದ ಕಲ್ಲು ಬಿದ್ದು ಗಾಯಗೊಂಡ ಘಟನೆ ನಡೆದಿರುವುದನ್ನೂ ಅವರು ಉಲ್ಲೇಖಿಸಿದರು.

ಅಕ್ರಮ ಗಣಿಗಾರಿಕೆ ತಕ್ಷಣವೇ ಸ್ಥಗಿತಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ದೂರುದಾರರಿಗೆ ಜೀವ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಚಿಂಚೋಳಿ ಘಟಕದ ಕಾರ್ಯದರ್ಶಿ ಚೇತನ ಯಾಕಾಪೂರ, ಸಾರಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಸ್ಟರ್, ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್ ಐನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button