ಸಚಿವ ಸಂಪುಟ ವಿಸ್ತರಣೆ ಕುರಿತು ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಡಾ. ಯತೀಂದ್ರ
ಮಹಿಳೆಯರಿಗೂ ಸಚಿವ ಸ್ಥಾನ ಸಿಗಲಿದೆ; ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದ ಸಚಿವ

ಬೀದರ್, ಆ.4: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಎರಡನೇ ಹಂತದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನೂತನ ಸಚಿವರು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದು, ಸಿದ್ದರಾಮಯ್ಯ ಕೂಡ ಎಲ್ಲರಿಗೂ ಶುಭ ಹಾರೈಸಿದ್ದಾರೆ. ಇದನ್ನು ಅಸಮಾಧಾನದೊಂದಿಗೆ ತಾಳೆಹಾಕುವುದು ಸರಿಯಲ್ಲ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗದೇ ಇರುವುದು ಸಹಜ ಪ್ರಕ್ರಿಯೆ. ಯಾವುದೇ ಸರ್ಕಾರದಲ್ಲಿಯೂ ಸಂಪುಟ ರಚನೆಯ ವೇಳೆ ಇಂತಹ ಅಸಮಾಧಾನಗಳು ಕಂಡುಬರುವುದು ಸಾಮಾನ್ಯ. ಹಿರಿಯರು ಮತ್ತು ಕಿರಿಯರಿಗೆ ಸಮತೋಲನ ಕಾಯ್ದುಕೊಂಡು ಸಚಿವ ಸ್ಥಾನಗಳನ್ನು ನೀಡಲಾಗಿದೆ. ಅಂತಿಮವಾಗಿ ಹೈಕಮಾಂಡ್ ಎಲ್ಲ ವಿಚಾರಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಇನ್ನೂ ಅವಕಾಶ ಸಿಗದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೂ ಸಚಿವ ಸ್ಥಾನ ನೀಡಲಾಗುವುದು. ಒಂದು ಸ್ಥಾನವನ್ನು ಖಾಲಿ ಇಡಲಾಗಿದ್ದು, ಅದರ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಗಾಯತ್ರಿ ಶಾಂತೇಗೌಡ ಅವರು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರು ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಮಾತ್ರ ಮಾಹಿತಿ ನೀಡಿದ್ದಾರೆ ಎಂದು ಯತೀಂದ್ರ ಹೇಳಿದರು. ಕುರುಬ ಸಮುದಾಯದ ಇಬ್ಬರಿಗೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.
ಸಿದ್ದರಾಮಯ್ಯ ಅವರ ರಾಜಕೀಯ ನಿರ್ಧಾರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ. ಸಂಪುಟ ರಚನೆಯಲ್ಲಿ ಎಲ್ಲ ಸಮುದಾಯಗಳಿಗೆ ಹಾಗೂ ಎಲ್ಲ ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ನಡೆದಿದೆ. ಈಗ ಕಂಡುಬರುವ ಸಣ್ಣಪುಟ್ಟ ಅಸಮಾಧಾನಗಳು ಕಾಲಕ್ರಮೇಣ ನಿವಾರಣೆಯಾಗಲಿವೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು. ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.



