ರಾಜ್ಯ

ಹಡಲಗಿ ಗ್ರಾಮದಲ್ಲಿ ಮಾದಿಗ ಸಮುದಾಯದವರ ಮೇಲೆ ದೌರ್ಜನ್ಯ ಆರೋಪ: ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

ಕಲಬುರಗಿ, ಆ.4: ಜಿಲ್ಲೆಯ ಆಳಂದ ತಾಲ್ಲೂಕಿನ ಹಡಲಗಿ ಗ್ರಾಮದಲ್ಲಿ ಮಾದಿಗ ಸಮುದಾಯದವರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾದಿಗ ಸಮುದಾಯದ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ದಶರಥ ಎಂ. ಕಲಗುರ್ಥಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಮುದಾಯದ ನೂರಾರು ಕಾರ್ಯಕರ್ತರು ಭಾಗವಹಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ, ನಿಂಬರ್ಗಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಯೋಜನಾ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಮನವಿಯ ಪ್ರಕಾರ, ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಹಡಲಗಿ ಗ್ರಾಮದಲ್ಲಿರುವ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣ ಕಳೆದ 11 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವ ಸೂಚನೆ ನೀಡದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸರ್ಕಾರಿ ಭೂಮಿಯನ್ನು ತೆರವುಗೊಳಿಸುವ ನೆಪದಲ್ಲಿ ಮಾದಿಗ ಸಮುದಾಯದ ಮನೆಗಳನ್ನು ಧ್ವಂಸಗೊಳಿಸಲು ಮುಂದಾಗಿದ್ದು, ಸಮುದಾಯದ ಜನರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ, ಪೊಲೀಸ್ ಅಧಿಕಾರಿಗಳು ಕೂಡ ಈ ಪ್ರಕರಣದಲ್ಲಿ ಸೂಕ್ತವಾಗಿ ವರ್ತಿಸದೇ, ದಲಿತ ಸಮುದಾಯದವರ ನಡುವೆ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಹಡಲಗಿ ಗ್ರಾಮದಲ್ಲಿ ನಡೆದಿರುವ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಜಿನಕೇರಿ, ರಾಜು ಎಸ್. ಕಟ್ಟಿಮನಿ, ರಮೇಶ್ ವಾಡೇಕರ್, ಚಂದ್ರಕಾಂತ ನಾಟೀಕಾರ್, ಸಚಿನ್ ಕಟ್ಟಿಮನಿ, ಬಸವರಾಜ ಕಾಳಗಿ, ರಾಮಕಾಂತ್ ಪೂಜಾರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button