ಅನಿಲ ಸೋರಿಕೆ ದುರಂತಕ್ಕೆ ಮೂವರು ಬಲಿ: ಸಮಗ್ರ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಣೆ; ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮ ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ

ಕಲಬುರಗಿ, ಆ.5: ಯಾದಗಿರಿ ಜಿಲ್ಲೆಯ ಕಡೆಯಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರೀಸ್ (CIL Laboratories) ಘಟಕದಲ್ಲಿ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೃತ ಕಾರ್ಮಿಕರ ಕುಟುಂಬಗಳಿಗೆ ಸಚಿವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಘಟನೆ ನಡೆದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಅನಿಲ ಸೋರಿಕೆಗೆ ನಿಖರ ಕಾರಣವನ್ನು ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ. ಈ ಘಟನೆಗೆ ಕಾರಣವಾದ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕೈಗಾರಿಕೆಗಳಲ್ಲಿ ಕಾರ್ಮಿಕರ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದ್ದು, ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಒತ್ತಿಹೇಳಿದ್ದಾರೆ. ಈ ಘಟನೆಯ ಹಿನ್ನೆಲೆ ರಾಜ್ಯದ ಎಲ್ಲಾ ಕೈಗಾರಿಕಾ ಘಟಕಗಳಲ್ಲಿ ಸುರಕ್ಷತಾ ಮಾನದಂಡಗಳ ಅನುಷ್ಠಾನ ಕುರಿತು ವಿಶೇಷ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಕಾನೂನು ಪ್ರಕಾರ ದೊರೆಯಬೇಕಾದ ಎಲ್ಲಾ ಪರಿಹಾರವನ್ನು ತ್ವರಿತವಾಗಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಮೃತ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಂಪನಿಯ ವತಿಯಿಂದ ತಲಾ ₹20 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.
ಇದರ ಜೊತೆಗೆ, ಕಾರ್ಮಿಕರ ಹಕ್ಕುಗಳಿಗೆ ಅನುಗುಣವಾಗಿ ಉದ್ಯೋಗಿಗಳ ರಾಜ್ಯ ವಿಮೆ (ESI) ಹಾಗೂ ಕಾರ್ಖಾನೆ ಕಾಯ್ದೆಯಡಿ ದೊರೆಯಬೇಕಾದ ಇತರೆ ಸೌಲಭ್ಯಗಳು ಮತ್ತು ಪರಿಹಾರಗಳನ್ನು ಕೂಡ ಯಾವುದೇ ವಿಳಂಬವಿಲ್ಲದೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.



