15 ವಿದ್ಯಾರ್ಥಿಗಳ ಫಲಿತಾಂಶ 48 ಗಂಟೆಗಳಲ್ಲಿ ಪ್ರಕಟಿಸಬೇಕು: ಅಹಿಂದ್ ಚಿಂತಕರ ವೇದಿಕೆ ಆಗ್ರಹ
ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯವನ್ನು ಕಪ್ಪುಪಟ್ಟಿಗೆ ಸೇರಿಸಲು ಒತ್ತಾಯ; ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ, ಆ.5: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಪದವಿ ಕಾಲೇಜುಗಳನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ ಕಪ್ಪುಪಟ್ಟಿಗೆ ಸೇರಿಸಬೇಕು. ಜೊತೆಗೆ 2018–19ನೇ ಸಾಲಿನ 15 ವಿದ್ಯಾರ್ಥಿಗಳ ಫಲಿತಾಂಶವನ್ನು 48 ಗಂಟೆಗಳೊಳಗೆ ಪ್ರಕಟಿಸಬೇಕು ಎಂದು ಅಹಿಂದ್ ಚಿಂತಕರ ವೇದಿಕೆಯ ರಾಜ್ಯಾಧ್ಯಕ್ಷ ಸೈಬಣ್ಣ ಜಮಾದಾರ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018–19ನೇ ಸಾಲಿನ ವಿದ್ಯಾರ್ಥಿಗಳ ಫಲಿತಾಂಶ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು, ಇದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಭವಿಷ್ಯ ಸಂಕಷ್ಟಕ್ಕೀಡಾಗಿದೆ ಎಂದು ಆರೋಪಿಸಿದರು.
ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಾದ ಶುಲ್ಕ ಸೇರಿದಂತೆ ಅಗತ್ಯ ನಿಯಮಗಳನ್ನು ಪಾಲಿಸದ ಕಾರಣ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.
ಈ ಹಿಂದೆ 2017–18ನೇ ಸಾಲಿನ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾದ ಸಂದರ್ಭದಲ್ಲೂ ಪ್ರತಿಭಟನೆ ನಡೆದ ಬಳಿಕ ಫಲಿತಾಂಶ ಪ್ರಕಟಿಸಲಾಗಿತ್ತು. ಆಗಲೇ ಸಂಬಂಧಿತ ಶಿಕ್ಷಣ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸು ಮಾಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ ಎಂದು ಹೇಳಿದರು.
ಪ್ರಸ್ತುತ 15 ವಿದ್ಯಾರ್ಥಿಗಳ ಮೊದಲ, ಎರಡನೇ, ಮೂರನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶಗಳು ಬಾಕಿ ಉಳಿದಿದ್ದು, ಆಗಸ್ಟ್ 13ರಿಂದ ವಿವಿಧ ಸರ್ಕಾರಿ ನೇಮಕಾತಿಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ನ್ಯಾಯಾಲಯದ ಆದೇಶಗಳಿದ್ದರೂ ವಿಶ್ವವಿದ್ಯಾಲಯ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಪ್ರತಿ ವರ್ಷ ಈ ಶಿಕ್ಷಣ ಸಂಸ್ಥೆಯ ವಿರುದ್ಧ ದೂರುಗಳು ಬರುತ್ತಿದ್ದರೂ ವಿಶ್ವವಿದ್ಯಾಲಯ ಪ್ರವೇಶಕ್ಕೆ ಅನುಮತಿ ನೀಡುತ್ತಿರುವುದು ಪ್ರಶ್ನಾರ್ಹವಾಗಿದೆ ಎಂದರು.
ಇನ್ನೂ 48 ಗಂಟೆಗಳೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಿದ್ದರೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಜಯ್ ಜಾಧವ್, ಸಂಜು ಹೊಡಲಕರ, ಸಂತೋಷ್ ಪೂಜಾರಿ, ಅಮರೇಶ್ ನರಜೆ, ಸಂತರಾಮ್ ಆಳಂಗೆ, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



