ರಾಜಕೀಯ

ಬಿಎಸ್‌ಪಿ ಮುಖಂಡ ಭೂಮಾನಂದ ಹದ್ದಿನಾಳ ಹತ್ಯೆ ಖಂಡಿಸಿ ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ

ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ; ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯ

ಕಲಬುರಗಿ, ಆ.6: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಜಿಲ್ಲಾ ಉಪಾಧ್ಯಕ್ಷ ಭೂಮಾನಂದ ಹದ್ದಿನಾಳ ಅವರ ಹತ್ಯೆಯನ್ನು ಖಂಡಿಸಿ ಆಗಸ್ಟ್ 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್‌ಪಿ ಮುಖಂಡ ಎಲ್.ಆರ್. ಬೋಸಲೆ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾನಂದ ಹದ್ದಿನಾಳ ಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹1 ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅವರಿಗೆ ಸಮರ್ಪಕ ರಕ್ಷಣೆ ದೊರೆಯುತ್ತಿಲ್ಲ ಎಂದು ಅವರು ಆರೋಪಿಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಾದ ಅನುದಾನಗಳನ್ನು ಸಮರ್ಪಕವಾಗಿ ಬಳಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ ಅವರು, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ಹಿಂಸಾಚಾರದ ಘಟನೆಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಡಾ. ಅನಿಲ್ ತೆಂಗಳಿ, ರಾಜ್ಯ ಸಮಿತಿ ಸದಸ್ಯ ಮಹಾದೇವ ಧನ್ನಿ, ಜಿಲ್ಲಾಧ್ಯಕ್ಷ ಶಿವಯೋಗಿ ಡಿ. ಹಡಗಿಲ್ಕರ್, ಮೈಲಾರಿ ಶೆಳ್ಳಗಿ, ಬಿ.ಎಸ್. ಕೋತಳಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button