ಜಿಲ್ಲಾಸುದ್ದಿ

ಆಲಗೂಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಗ್ರಾಮಸ್ಥರ ಪ್ರತಿಭಟನೆ

ಎರಡು ತಿಂಗಳಿಂದ ನೀರಿನ ತೊಂದರೆ; ದೂರದ ಬಾವಿಗಳಿಂದ ನೀರು ತರುವ ಸ್ಥಿತಿ

ಕಲಬುರಗಿ, ಅ. 30: ಜಿಲ್ಲೆಯ ಆಳಂದ ತಾಲೂಕಿನ ಅವರಾದ (ಬಿ) ಹೋಬಳಿಯ ಆಲಗೂಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ತಕ್ಷಣ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ಈ ವರ್ಷ ಮಳೆಯಾಗದ ಕಾರಣ ಕಳೆದ ಎರಡು ತಿಂಗಳಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು. ಗ್ರಾಮದಲ್ಲಿದ್ದ ಕೊಳವೆಬಾವಿಗಳಲ್ಲಿನ ನೀರು ಬತ್ತಿಹೋಗಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ದೂರದ ಬಾವಿಗಳಿಂದ ನೀರು ತರುವ ಪರಿಸ್ಥಿತಿ

ಗ್ರಾಮಸ್ಥರು ನಾಲ್ಕರಿಂದ ಐದು ಕಿಲೋಮೀಟರ್ ದೂರದಲ್ಲಿರುವ ಜಮೀನುಗಳಲ್ಲಿನ ಬಾವಿಗಳಿಂದ ನೀರು ತಂದು ಬಳಸುವಂತಾಗಿದೆ. ಕೂಲಿ ಕಾರ್ಮಿಕರು ಮತ್ತು ರೈತರು ಕೆಲಸಕ್ಕೆ ತೆರಳುವುದನ್ನು ಬಿಟ್ಟು ನೀರು ತರುವುದಕ್ಕಾಗಿಯೇ ಹೆಚ್ಚಿನ ಸಮಯ ವ್ಯಯಿಸಬೇಕಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ಮಳೆಯ ಕೊರತೆಯಿಂದ ರೈತರ ಜಮೀನುಗಳಲ್ಲಿನ ಬೆಳೆಗಳು ಒಣಗುತ್ತಿವೆ. ಸಾಲ ಮಾಡಿ ಬೆಳೆ ಬೆಳೆದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಕುಟುಂಬಗಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ರೈತರು ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ಕೈಗೊಳ್ಳುವ ಆತಂಕ ಎದುರಾಗಿದೆ ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದರು.

ನೀರಿನ ಸಮಸ್ಯೆ ಪರಿಹರಿಸಲು ಆಗ್ರಹ

ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು. ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಆರಂಭಿಸುವ ಮೂಲಕ ಗ್ರಾಮಸ್ಥರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಹಾಗೂ ಗ್ರಾಮಸ್ಥರಾದ ಬಸವರಾಜ, ಕಾಶಿರಾಯ, ಲಕ್ಷ್ಮಣ, ಲಕ್ಷ್ಮೀಕಾಂತ ಗೋವಿ, ಚಂದ್ರಕಾಂತ, ಶರಣಪ್ಪ, ಈರಣ್ಣ, ಮಲ್ಲಿಕಾರ್ಜುನ, ಅಂಬಾರಾಯ, ಸಂಜುಕುಮಾರ ಮತ್ತು ಹನುಮಂತ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button