ಶಿಕ್ಷಣ

ವಿಜ್ಞಾನ–ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ವಿದ್ಯಾರ್ಥಿಗಳು ಮುಂದಾಗಲಿ: ಪ್ರೊ. ಆರ್.ಆರ್. ಬಿರಾದಾರ್ ಕರೆ

ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ–ಪರಿಚಯ ಕಾರ್ಯಕ್ರಮ ಸಮಾರೋಪ

ಕಲಬುರಗಿ, ಆ.6: ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಂಶೋಧನೆಗಳಲ್ಲಿ ತೊಡಗಿ, ಭಾರತದ ಹೆಸರನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಕರೆ ನೀಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ವತಿಯಿಂದ ವಿಶ್ವವಿದ್ಯಾಲಯದ 12 ನಿಕಾಯಗಳು ಹಾಗೂ 29 ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಕಾಲ ಆಯೋಜಿಸಿದ್ದ ಸ್ವಾಗತ–ಪರಿಚಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಶಿಕ್ಷಣ, ಸಂಶೋಧನೆ ಮತ್ತು ನವೀನತೆಯ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ಇ–ಗ್ರಂಥಾಲಯ, ಸುಸಜ್ಜಿತ ವಸತಿ ನಿಲಯಗಳು, ಆಧುನಿಕ ಮಾಹಿತಿ ತಂತ್ರಜ್ಞಾನ ಸೌಲಭ್ಯಗಳು ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಈ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜೀವ ವಿಜ್ಞಾನ ವಿಭಾಗದ ಡೀನ್ ಪ್ರೊ. ಸತ್ಯನಾರಾಯಣ, ಕಂಪ್ಯೂಟರ್ ವಿಜ್ಞಾನ ವಿಭಾಗದ ಡೀನ್ ಪ್ರೊ. ಆರ್.ಎಸ್. ಹೆಗಡಿ, ರಸಾಯನಶಾಸ್ತ್ರ ವಿಭಾಗದ ಡೀನ್ ಪ್ರೊ. ಪಳ್ಳೆಪೋಗು ರಾಘವಯ್ಯ, ಇಂಜಿನಿಯರಿಂಗ್ ವಿಭಾಗದ ಡೀನ್ ಪ್ರೊ. ಅಮರೇಂದ್ರ ಮತ್ಸ, ಭೂವಿಜ್ಞಾನ ವಿಭಾಗದ ಡೀನ್ ಪ್ರೊ. ಪ್ರಶಾಂತ್ ಹಾಗೂ ಭೌತ ವಿಜ್ಞಾನ ವಿಭಾಗದ ಡೀನ್ ಪ್ರೊ. ರಾಜೀವ್ ಜೋಶಿ ತಮ್ಮ ತಮ್ಮ ವಿಭಾಗಗಳ ಶೈಕ್ಷಣಿಕ ಚಟುವಟಿಕೆಗಳು, ಸಂಶೋಧನಾ ಅವಕಾಶಗಳು ಹಾಗೂ ಭವಿಷ್ಯದ ಅಧ್ಯಯನ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವಿದ್ಯಾರ್ಥಿ ಕಲ್ಯಾಣ ಮತ್ತು ಕಾನೂನು ವಿಭಾಗದ ಡೀನ್ ಪ್ರೊ. ಬಸವರಾಜ್ ಎಂ. ಕುಬಕಡ್ಡಿ ವಿಶ್ವವಿದ್ಯಾಲಯದ ನೀತಿ ಸಂಹಿತೆ ಹಾಗೂ ಶಿಸ್ತು ನಿಯಮಗಳ ಕುರಿತು ವಿವರಿಸಿದರು. ವಸತಿ ನಿಲಯಗಳ ಮುಖ್ಯಸ್ಥ ಡಾ. ಬಸವರಾಜ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ, ಸೌಲಭ್ಯಗಳು ಹಾಗೂ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೊ. ಜನಾರ್ದನ ರೆಡ್ಡಿ, ಪ್ರೊ. ನಾಗರಾಜ ಧಾರವಾಡಕರ, ಪ್ರೊ. ಚೈತನ್ಯ, ಪ್ರೊ. ವೆಂಕಟರಮಣ ದೊಡ್ಡಿ, ಪ್ರೊ. ಪ್ರಮೋದ್, ಪ್ರೊ. ರಾಜಶ್ರೀ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಡಿಎಸ್‌ಡಬ್ಲ್ಯು ಸಿಬ್ಬಂದಿಗಳಾದ ಚರಣ್ ಮತ್ತು ಅರುಣ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ವಾಣಿಶ್ರೀ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button