ಶಿಕ್ಷಣ

ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಸಿಐಡಿ ತನಿಖೆಗೆ ಆಗ್ರಹ: ಆಗಸ್ಟ್ 11ರಂದು ಕಲಬುರಗಿಯಲ್ಲಿ ಅನಿರ್ದಿಷ್ಟ ಧರಣಿ

ವಸತಿ ಶಾಲೆಗಳಲ್ಲಿ ಕಳಪೆ ಆಹಾರ ಪೂರೈಕೆ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕಲಬುರಗಿ, ಆ.7: ಚಿತ್ತಾಪುರ ತಾಲ್ಲೂಕಿನ ದಂಡೋತಿ ಹಾಗೂ ಅಫಜಲಪುರ ತಾಲ್ಲೂಕಿನ ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 11ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೇವಲ ಪ್ರಾಂಶುಪಾಲರು, ವಾರ್ಡನ್‌ಗಳು ಅಥವಾ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಘಟನೆಯ ಹಿಂದಿರುವ ಸಂಪೂರ್ಣ ಸತ್ಯಾಂಶ ಹೊರಬರಲು ಸಿಐಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲೂ ವಿಳಂಬವಾಗುತ್ತಿದ್ದು, ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಶಿಕ್ಷಣದ ಗುಣಮಟ್ಟಕ್ಕಿಂತ ಬೇರೆ ವಿಚಾರಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ಹೊರಗುತ್ತಿಗೆ ನೀಡುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಗಳು ನಡೆದಿವೆ ಎಂದು ಆರೋಪಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ನೇಮಕಾತಿಯಲ್ಲಿಯೂ ಅಕ್ರಮ ನಡೆದಿರುವ ಆರೋಪ ಮಾಡಿರುವ ಅವರು, ದಂಡೋತಿ ಹಾಗೂ ಕರ್ಜಗಿ ವಸತಿ ಶಾಲೆಗಳಲ್ಲಿ ನಡೆದ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವ ಮೂಲಕ ನೈಜ ಸತ್ಯ ಹೊರತರಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮೊಹಮ್ಮದ್ ಜಮೀರುದ್ದೀನ್, ಮೇಘರಾಜ್ ಕಠಾರೆ, ಲೈಲಾ ತೆಲೋಗಿ ಕರ್ಜಗಿ, ನರಸಮ್ಮ ಚಂದನಕೇರಾ, ಪರಶುರಾಮ ಹಡಲಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button