ರಾಜಕೀಯ

ಕಲಬುರಗಿ ಜಿಲ್ಲೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಂಸದ ಡಾ. ಉಮೇಶ್ ಜಾಧವ್ ಆರೋಪ

ಕಾನೂನು ಸುವ್ಯವಸ್ಥೆ, ರೈತರ ಸಮಸ್ಯೆ, ವಸತಿ ಶಾಲೆಗಳ ಅವ್ಯವಸ್ಥೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ

ಕಲಬುರಗಿ, ಆ.1: ರಾಜ್ಯದ ಗೃಹ ಸಚಿವರ ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿರುವ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಡಾ. ಉಮೇಶ್ ಜಾಧವ್, ಕಾಂಗ್ರೆಸ್ ಸರ್ಕಾರ ತಕ್ಷಣ ಪರಿಸ್ಥಿತಿಯನ್ನು ಸುಧಾರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಜನಸಾಮಾನ್ಯರು ಕುಡಿಯುವ ನೀರು, ರಸ್ತೆ, ರೈತರ ಸಂಕಷ್ಟ, ನಿರುದ್ಯೋಗ ಹಾಗೂ ಮೂಲಸೌಕರ್ಯಗಳ ಕೊರತೆಯಂತಹ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಬದಲು ಸರ್ಕಾರ ರಾಜಕೀಯಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ರೈತರು, ಯುವಕರು, ಮಹಿಳೆಯರು ಹಾಗೂ ಬಡವರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ಕಾನೂನು ಸುವ್ಯವಸ್ಥೆ ಕುಸಿದಿರುವುದರಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಅಫಜಲಪುರ ತಾಲ್ಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣವನ್ನು ಉಲ್ಲೇಖಿಸಿ, ಇಂತಹ ಗಂಭೀರ ಘಟನೆ ನಡೆದರೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಆರೋಪಿಸಿದರು.

ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ ಪರಿಹಾರ ಕಾಮಗಾರಿಗಳನ್ನು ಆರಂಭಿಸಿಲ್ಲ. ಇದರಿಂದ ಕೃಷಿ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ದೊಡ್ಡ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಮಳೆ ಮಾಪಕಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯದಿಂದ ರೈತರಿಗೆ ಬೆಳೆ ವಿಮೆ ಪರಿಹಾರ ಪಡೆಯಲು ತೊಂದರೆ ಉಂಟಾಗಿದೆ ಎಂದು ಆರೋಪಿಸಿದ ಅವರು, ಮಳೆ ಪ್ರಮಾಣ ದಾಖಲಿಸುವ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇರಬೇಕು ಹಾಗೂ ಅಧಿಕಾರಿಗಳ ಕಾರ್ಯವೈಖರಿಯ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬೆಳೆ ಹಾನಿ ಮೌಲ್ಯಮಾಪನದಲ್ಲಿ ವೈಜ್ಞಾನಿಕ ವಿಧಾನ ಅನುಸರಿಸದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಬೆಳೆ ಕಳೆದುಕೊಂಡ ಪ್ರತಿಯೊಬ್ಬ ರೈತನಿಗೂ ಶೇ.100ರಷ್ಟು ಬೆಳೆ ವಿಮೆ ಮತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಾವೇರಿ ನದಿಯ ನೀರಿನ ಹಂಚಿಕೆ ವಿಷಯದಲ್ಲಿಯೂ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಡಾ. ಜಾಧವ್, ಕರ್ನಾಟಕದ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶರಣಪ್ಪ ತಳವಾರ, ನಿತಿನ್ ಗುಟ್ಟೇದಾರ, ಲಿಂಗರಾಜ್ ಬಿರಾದಾರ, ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button