ವಿಷಾನಿಲ ದುರಂತ ಸ್ಥಳಕ್ಕೆ ಸಚಿವರ ಭೇಟಿ; ಮೃತರ ಕುಟುಂಬಕ್ಕೆ ಪರಿಹಾರ, ಕಠಿಣ ಕ್ರಮಕ್ಕೆ ಸೂಚನೆ
ಸುರಕ್ಷತಾ ನಿಯಮಗಳ ಉಲ್ಲಂಘನೆ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ – ಸಂಸದ ರಾಧಾಕೃಷ್ಣ ದೊಡ್ಡಮನಿ ಸಂತಾಪ

ಯಾದಗಿರಿ, ಆ.6: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಕಡೆಯಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಸ್ಥಳಕ್ಕೆ ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ರಾಸಾಯನಿಕ ಸಂಸ್ಥೆಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆಗೆ ಸಚಿವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೃತರ ಕುಟುಂಬಗಳ ಮಾಹಿತಿ ಸಂಗ್ರಹಿಸಿ ಸರ್ಕಾರದಿಂದ ನೀಡಬಹುದಾದ ಪರಿಹಾರದ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ ಸಚಿವರು, ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಲಪಡಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು, ಶರಣಗೌಡ ಕಂದಕೂರ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಮಾಜಿ ಸಚಿವ ಬಾಬುರಾವ ಚಿಂಚನಸೂರ ಹಾಗೂ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ, ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಕೂಡ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ವಿಷಾನಿಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದ ಅವರು, ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಗಾಯಾಳುಗಳಿಗೆ ತುರ್ತು ಹಾಗೂ ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.
ಕೈಗಾರಿಕಾ ಸಂಸ್ಥೆಗಳಲ್ಲಿ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ ಸಂಸದರು, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವನ ಸೂಚಿಸಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.



