ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳ ಪತ್ತೆ: ಆರೋಪಿ ಬಂಧನ

ಬೀದರ್, ಸೆ.22: ಜಿಲ್ಲೆಯ ಸಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಲಾಧಾ ಗ್ರಾಮದ ಹೊಲವೊಂದರಲ್ಲಿ ಯಾವುದೇ ಸರ್ಕಾರಿ ಅನುಮತಿ ಇಲ್ಲದೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐಪಿಎಸ್ ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಭಾಲ್ಕಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾಂವಿ ಅವರ ಮುಂದಾಳತ್ವದಲ್ಲಿ, ಔರಾದ್-ಬಿ ವೃತ್ತದ ಸಿಪಿಐ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಸಂತಪುರ ಪೊಲೀಸ್ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಲಾಧಾ ಗ್ರಾಮದ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ 2,650 ಗಾಂಜಾ ಗಿಡಗಳು ಪತ್ತೆಯಾಗಿದ್ದು, ಒಟ್ಟು 2 ಕೆ.ಜಿ. 650 ಗ್ರಾಂ ತೂಕ ಹೊಂದಿದ್ದವು. ಇವುಗಳ ಅಂದಾಜು ಮೌಲ್ಯ ₹1.50 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐಪಿಎಸ್ ಅವರು ಶ್ಲಾಘಿಸಿದ್ದಾರೆ.
ಮಾದಕ ವಸ್ತುಗಳನ್ನು ಅಕ್ರಮವಾಗಿ ಬೆಳೆಯುವುದು, ಸೇವಿಸುವುದು ಹಾಗೂ ಸರಬರಾಜು ಮಾಡುವುದು ಕಾನೂನುಬಾಹಿರ ಅಪರಾಧವಾಗಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ್ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದೆ, ತಮ್ಮ ಹಾಗೂ ಕುಟುಂಬದ ಭವಿಷ್ಯವನ್ನು ಹಾಳು ಮಾಡಿಕೊಳ್ಳದಂತೆ ಪೊಲೀಸರು ಮನವಿ ಮಾಡಿದ್ದಾರೆ. ಬೀದರ್ ಜಿಲ್ಲೆಯನ್ನು ಮಾದಕ ವಸ್ತುಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.



