ಶಿಕ್ಷಣ

ಆಗಸ್ಟ್ 9ರಂದು ಕಲಬುರಗಿಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ

96 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ನೀಟ್ ಹಾಗೂ ಪಿಯುಸಿ ರಾಜ್ಯ ರ‍್ಯಾಂಕ್ ವಿಜೇತರಿಗೆ ಗೌರವ; 280ಕ್ಕೂ ಹೆಚ್ಚು ಉಪನ್ಯಾಸಕರಿಗೆ ಅಭಿನಂದನೆ

ಕಲಬುರಗಿ, ಆ.7: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 9ರಂದು ಬೆಳಿಗ್ಗೆ 10.15ಕ್ಕೆ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಟಿ. ರಂಗೋಳಿ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೈಕ್ಷಣಿಕ ವಾತಾವರಣವನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಾಧನೆಯನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ರಾಜ್ಯದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಮಹಾಪೌರೆ ವರ್ಷಾ ಜಾನೆ ಹಾಗೂ ಸಂಘದ ರಾಜ್ಯಾಧ್ಯಕ್ಷ ನಿಂಗೇಗೌಡ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಒಟ್ಟು 96 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಕಲಾ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಕು. ಸೃಷ್ಟಿ ಪಾಟೀಲ, ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಕು. ಪ್ರೇಮ ರಾಜಕುಮಾರ್ ಹಾಗೂ ನೀಟ್–2026 ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 19ನೇ ಹಾಗೂ ರಾಜ್ಯ ಮಟ್ಟದಲ್ಲಿ 13ನೇ ರ‍್ಯಾಂಕ್ ಪಡೆದ ಕು. ಚನ್ನಬಸವ ಡಿ. ಕೊರಳಿ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು.

ಇದಲ್ಲದೆ, ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ದಾಖಲಿಸಲು ಶ್ರಮಿಸಿದ 280ಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳ ಉಪನ್ಯಾಸಕರನ್ನು ಅಭಿನಂದಿಸಲಾಗುತ್ತದೆ. ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಕಾಲೇಜುಗಳ ಪ್ರಾಂಶುಪಾಲರಿಗೂ ಈ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.

ಇದೇ ವೇದಿಕೆಯಲ್ಲಿ 2026–31ನೇ ಅವಧಿಗೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ ಹಾಗೂ ವಿವಿಧ ಸಂಘಟನೆಗಳಿಗೆ ಆಯ್ಕೆಯಾದ ಉಪನ್ಯಾಸಕರಿಗೂ ಗೌರವ ಸಲ್ಲಿಸಲಾಗುವುದು ಎಂದು ಎಸ್.ಟಿ. ರಂಗೋಳಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗುಂಡಯ್ಯ ಶಂಕರಯ್ಯ, ನಾಗರಾಜ್ ಬಿ. ಮೈಲವಾರ್, ಸವಿತಾ ಬಿ. ನಾಸಿ, ಪಾಂಡು ಎಲ್. ರಾಠೋಡ್, ಶರಣಪ್ಪ ಓಂಕಾರ್, ನರಸಿಂಗರಾವ್ ಆರ್. ಕುಲಕರ್ಣಿ, ಸಿದ್ದಲಿಂಗಪ್ಪ ಪೂಜಾರಿ, ಧರ್ಮರಾಜ ಜವಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button