ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
ಪೋಕ್ಸೊ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ತೀರ್ಪು; ₹50 ಸಾವಿರ ದಂಡ, ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡಲು ಆದೇಶ

ಕಲಬುರಗಿ, ಜು.14: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶ್ರೀಚಂದ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಮಹಾರಾಷ್ಟ್ರದ ಪುಣೆಯಲ್ಲಿ ವಾಸವಾಗಿರುವ ಸಲ್ಮಾನ್ ತಂದೆ ಲಾಡ್ಲೆಸಾಬ್ ಶೇಖ್ (22) ಎಂಬಾತನಿಗೆ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶ ಎಸ್.ಎಲ್. ಚವ್ಹಾಣ್ ಅವರು ತೀರ್ಪು ಪ್ರಕಟಿಸಿದ್ದು, ಪೋಕ್ಸೊ ಕಾಯ್ದೆಯ ಕಲಂ 4(2)ರಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ, ದಂಡ ಪಾವತಿಸದಿದ್ದರೆ 6 ತಿಂಗಳ ಹೆಚ್ಚುವರಿ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಲಂ 137(2)ರಡಿ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ, ದಂಡ ಪಾವತಿಸದಿದ್ದರೆ 3 ತಿಂಗಳ ಹೆಚ್ಚುವರಿ ಶಿಕ್ಷೆ ವಿಧಿಸಲಾಗಿದೆ.
ಇದಲ್ಲದೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಸಂತ್ರಸ್ತ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ
2025ರ ಮೇ 24ರಂದು ರಾತ್ರಿ ನಗರದ ರಾಣೇಶೀರ್ ದರ್ಗಾ ಸಮೀಪದ ನಿರ್ಜನ ಕಟ್ಟಡದಲ್ಲಿ ಈ ಘಟನೆ ನಡೆದಿತ್ತು. ಆರೋಪಿಯು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿ, ನಂತರ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದನು.
ಮೇ 23ರಂದು ಪುಣೆಯಿಂದ ಕಲಬುರಗಿಗೆ ಬಂದಿದ್ದ ಆರೋಪಿ, ಬಾಲಕಿಯನ್ನು ಮನೆ ಹೊರಗೆ ಕರೆಸಿ ನಿರ್ಜನ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದನು. ಬಳಿಕ ಮರುದಿನ ಆಕೆಯನ್ನು ಪುಣೆಗೆ ಕರೆದೊಯ್ದು ಅಲ್ಲಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ತನಿಖೆಯಲ್ಲಿ ಬಹಿರಂಗವಾಗಿತ್ತು.
ನಂತರ ಪೊಲೀಸರು ಬಾಲಕಿ ಹಾಗೂ ಆರೋಪಿಯನ್ನು ಪತ್ತೆಹಚ್ಚಿ ವೈದ್ಯಕೀಯ ಪರೀಕ್ಷೆ ನಡೆಸಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ್ ವಾದ ಮಂಡಿಸಿದರು.



