ದೇವಲಗಾಣಗಾಪುರ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಕುರಿತು ಜಾಗೃತಿ ಕಾರ್ಯಕ್ರಮ
ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತೆ, ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ಅಫಜಲಪುರ, ಆ.7: ತಾಲ್ಲೂಕಿನ ದೇವಲಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಕೆಎಚ್ ಶಾಲೆಯ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮತ್ತು ಕಾನೂನು ಜಾಗೃತಿ ಕುರಿತು ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ದೇವಲಗಾಣಗಾಪುರ ಪೊಲೀಸ್ ಠಾಣೆಗೆ ಆಹ್ವಾನಿಸಿ, ಪೊಲೀಸ್ ಅಧಿಕಾರಿಗಳು ಠಾಣೆಯ ಕಾರ್ಯವೈಖರಿ, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳು ಹಾಗೂ ಕಾನೂನು ಪಾಲನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳು, ಮಾದಕ ವಸ್ತುಗಳ ದುಷ್ಪರಿಣಾಮಗಳು, ಸೈಬರ್ ಅಪರಾಧಗಳಿಂದ ರಕ್ಷಿಸಿಕೊಳ್ಳುವ ವಿಧಾನಗಳು ಹಾಗೂ ವಿವಿಧ ರೀತಿಯ ಅಪರಾಧಗಳನ್ನು ತಡೆಗಟ್ಟುವ ಕುರಿತು ವಿವರವಾಗಿ ತಿಳಿಸಲಾಯಿತು. ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಲಾಯಿತು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ಅಪರಾಧ ತಡೆ ಹಾಗೂ ಸುರಕ್ಷಿತ ಜೀವನಶೈಲಿಯ ಬಗ್ಗೆ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.



