ಬಿಎಸ್‌ಪಿ ಮುಖಂಡ ಭೂಮಾನಂದ ಹದ್ದಿನಾಳ ಹತ್ಯೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಆರೋಪಿಗಳ ಬಂಧನ, ಸಿಬಿಐ ತನಿಖೆ ಹಾಗೂ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವಂತೆ ಆಗ್ರಹ

ಕಲಬುರಗಿ, ಆ.7: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಜಿಲ್ಲಾ ಉಪಾಧ್ಯಕ್ಷ ಭೂಮಾನಂದ ಹದ್ದಿನಾಳ ಅವರ ಹತ್ಯೆಯನ್ನು ಖಂಡಿಸಿ ಬಿಎಸ್‌ಪಿ ಕಾರ್ಯಕರ್ತರು ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಭೂಮಾನಂದ ಹದ್ದಿನಾಳ ಹತ್ಯೆ ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಎಸ್‌ಪಿ ಮುಖಂಡರು, ರಾಜ್ಯದಲ್ಲಿ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಅವರಿಗೆ ಸಮರ್ಪಕ ರಕ್ಷಣೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎಲ್.ಆರ್. ಬೋಸಲೆ, ರಾಜ್ಯ ಕಾರ್ಯದರ್ಶಿ ಡಾ. ಅನಿಲ್ ತೆಂಗಳಿ, ರಾಜ್ಯ ಸಮಿತಿ ಸದಸ್ಯ ಮಹಾದೇವ ಧನ್ನಿ, ಜಿಲ್ಲಾ ಅಧ್ಯಕ್ಷ ಶಿವಯೋಗಿ ಡಿ. ಹಡಗಿಲಕರ್, ಮೈಲಾರಿ ಶೆಳ್ಳಗಿ, ಬಿ.ಎಸ್. ಕೋತಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.



