ರಾಜ್ಯ

ಶಾಖಾಪುರ ಪ್ರಕರಣದ 17 ಆರೋಪಿಗಳನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲು ಆಗ್ರಹ

ಪರಾರಿಯಾಗಿರುವ ಆರೋಪಿಗಳ ಬಂಧನ, ಸಾಕ್ಷಿಗಳಿಗೆ ರಕ್ಷಣೆ ಹಾಗೂ ವಿಶೇಷ ತನಿಖೆಗೆ ಒತ್ತಾಯ; ಬೇಡಿಕೆ ಈಡೇರದಿದ್ದರೆ ಹೋರಾಟದ ಎಚ್ಚರಿಕೆ

ಕಲಬುರಗಿ, ಆ.7: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರದಲ್ಲಿ ನಡೆದ ದೌರ್ಜನ್ಯ ಪ್ರಕರಣದ ಎಲ್ಲ 17 ಆರೋಪಿಗಳನ್ನು ತಕ್ಷಣ ಬಂಧಿಸಿ, ಅವರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಬೇಕು ಎಂದು ಗೊಂಡ ಸಂಘರ್ಷ ಸಮಿತಿಯ ಅಧ್ಯಕ್ಷ ಸಂತೋಷ್ ಎಸ್. ಪೂಜಾರಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಕರ್ಮಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಸಮುದಾಯದ ಜನರು ದೌರ್ಜನ್ಯ, ಬೆದರಿಕೆ ಅಥವಾ ಕಾನೂನುಬಾಹಿರ ಕೃತ್ಯಗಳಿಗೆ ಒಳಗಾಗದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶಾಖಾಪುರ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ 17 ಆರೋಪಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಶೀಟರ್ ತೆರೆಯಬೇಕು. ಪ್ರಕರಣದ ದೂರುದಾರರು ಹಾಗೂ ಸಾಕ್ಷಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಿ, ಯಾವುದೇ ರೀತಿಯ ಬೆದರಿಕೆ ಅಥವಾ ಒತ್ತಡ ನಡೆಯದಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿರುವ ಕುಟುಂಬಗಳಿಗೆ ಕುಡಿಯುವ ನೀರು, ವಿದ್ಯುತ್, ದಿನಸಿ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ತಾಲೂಕು ಆಡಳಿತ ತಕ್ಷಣವೇ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪಕ್ಷಪಾತದಿಂದ ವರ್ತಿಸುತ್ತಿರುವ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಂಪೂರ್ಣ ತನಿಖೆಯನ್ನು ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಸಮಿತಿಯ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸದಿದ್ದರೆ, ಗೊಂಡ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಯಾದಗಿರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ, ಸುರಪುರ ಬಂದ್ ಹಾಗೂ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂತೋಷ್ ಎಸ್. ಪೂಜಾರಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಭೀಮಣ್ಣ ಕರೇಗೊಂಡ, ಪೀರಪ್ಪ ಪೂಜಾರಿ, ಸಚಿನ್ ಎಸ್. ಗೊಂಡ ಸೇರಿದಂತೆ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button