ರಾಜಾ ಬಕ್ಸರ್ ಗುಡ್ಡದ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಂಕನೂರು
ಕಾಮಗಾರಿ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ

ಕಮಲಾಪುರ, ಆ.8– ತಾಲ್ಲೂಕಿನ ಮಹಾಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಾ ಬಕ್ಸರ್ ಗುಡ್ಡದ ಬಳಿ ವಿಜಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಂಕನೂರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿ ಸ್ಥಳಕ್ಕೆ ತೆರಳುವ ರಸ್ತೆ ದುರ್ಗಮವಾಗಿದ್ದ ಹಿನ್ನೆಲೆಯಲ್ಲಿ ಸಿಇಒ ಅವರು ಸುಮಾರು ಒಂದು ಕಿಲೋಮೀಟರ್ ದ್ವಿಚಕ್ರ ವಾಹನದಲ್ಲಿ ಹಾಗೂ ಬಳಿಕ ಮತ್ತೊಂದು ಕಿಲೋಮೀಟರ್ ಕಾಲ್ನಡಿಗೆಯಲ್ಲೇ ತೆರಳಿ ಕಾಮಗಾರಿಯ ಪ್ರಗತಿ ವೀಕ್ಷಿಸಿದರು. ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟ, ಪ್ರಗತಿ, ಕಾರ್ಮಿಕರ ಹಾಜರಾತಿ ಹಾಗೂ ಅವರಿಗೆ ಕಲ್ಪಿಸಿರುವ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿ ಸ್ಥಳದಲ್ಲಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಕೆಲಸದ ಸ್ವರೂಪ, ವೇತನ ಪಾವತಿ, ಸ್ಥಳೀಯವಾಗಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಕಾರ್ಮಿಕರ ಸುರಕ್ಷತೆ ಮತ್ತು ಮೂಲಭೂತ ಸೌಲಭ್ಯಗಳಿಗೆ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರುವುದನ್ನು ಪರಿಶೀಲಿಸಿ, ಉದ್ಯೋಗ ಖಾತ್ರಿ ಕಾಮಗಾರಿಗಳಲ್ಲಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪಾಟೀಲ, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಜಗನ್ನಾಥ ರೆಡ್ಡಿ, ಮಹಾಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಯೋಜನಾ ತಾಂತ್ರಿಕ ಸಂಯೋಜಕ ರಾಹುಲ್, ತಾಂತ್ರಿಕ ಸಹಾಯಕ ಮುರುಗೇಂದ್ರ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.



