ಜಿಲ್ಲಾಸುದ್ದಿ

ಬೆಳೆ ಹಾನಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ

ಮಳೆ ಕೊರತೆಯಿಂದ ಬರದ ಛಾಯೆ; ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಎನ್‌ಡಿಆರ್‌ಎಫ್ ನಿಯಮ ಸರಳೀಕರಣಕ್ಕೆ ರಾಜ್ಯದ ಒತ್ತಾಯ

ಕಲಬುರಗಿ, ಆ.10: ಸೂಪರ್ ಎಲ್‌ನಿನೋ ಪರಿಣಾಮ ರಾಜ್ಯದಲ್ಲಿ ಶೇ.75ರಷ್ಟು ಮಳೆ ಕೊರತೆಯಾಗಿದ್ದು, ಬರದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿ ಕುರಿತು ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸೋಮವಾರ ಕಲಬುರಗಿ ತಾಲೂಕಿನ ಅವರಾದ (ಬಿ) ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಸರ್ವೆ ನಂ.67/6ರ ವಿಮಲಾಬಾಯಿ ಅಂಬಾರಾಯ ಹಾಗೂ ಸರ್ವೆ ನಂ.67/7ರ ಶಕುಂತಲಾ ಸೂರ್ಯಕಾಂತ ಅವರ ಹೊಲಗಳಿಗೆ ತೆರಳಿ ಮುಂಗಾರು ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಿಸಿದರು.

ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಕುರಿತು ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಭೇಟಿಗೆ ಬಂದಿರುವುದಾಗಿ ಸಚಿವರು ತಿಳಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ. ಕೇಂದ್ರದ ಕಠಿಣ ಎನ್‌ಡಿಆರ್‌ಎಫ್ ನಿಯಮಾವಳಿಗಳಿಂದ ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಯಮಾವಳಿಗಳನ್ನು ಸರಳೀಕರಣಗೊಳಿಸಬೇಕು ಎಂಬುದು ರಾಜ್ಯ ಸರ್ಕಾರದ ಬೇಡಿಕೆಯಾಗಿದ್ದು, ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಪುರಸ್ಕರಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕಳೆದ ವರ್ಷ ಕಲಬುರಗಿ ಜಿಲ್ಲೆಗೆ ದಾಖಲೆಯ ₹650 ಕೋಟಿ ಪರಿಹಾರ ಒದಗಿಸಲಾಗಿದ್ದು, ಇಡೀ ದೇಶದಲ್ಲೇ ಅತಿ ಹೆಚ್ಚು ಪರಿಹಾರ ಪಡೆದ ಎರಡನೇ ಜಿಲ್ಲೆ ಕಲಬುರಗಿಯಾಗಿದೆ. ಈ ವರ್ಷವೂ ಇದುವರೆಗೆ 4.50 ಲಕ್ಷ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಕಳೆದ ಬಾರಿ ಶೇ.20ರಷ್ಟು ಗ್ರಾಮ ಪಂಚಾಯಿತಿ ಪ್ರದೇಶಗಳಲ್ಲಿ ರೈತರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ ಎಂಬ ದೂರುಗಳು ಬಂದಿದ್ದವು. ಈ ಬಾರಿ ಅಂತಹ ಸಮಸ್ಯೆ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಪೂರೈಕೆಗಾಗಿ ₹1 ಕೋಟಿ ಅನುದಾನ ನೀಡಲಾಗಿದೆ. ಹೀಗಾಗಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆಯಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಈಗಾಗಲೇ ₹5 ಕೋಟಿ ಒದಗಿಸಲಾಗಿದ್ದು, ಅದರಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.

ಪರಿಹಾರ ನೀಡುವಂತೆ ರೈತರ ಮನವಿ:
ಕ್ಷೇತ್ರ ಭೇಟಿ ವೇಳೆ ಸಚಿವರನ್ನು ಭೇಟಿಯಾದ ರೈತ ಮಹಿಳೆ ವಿಮಲಾಬಾಯಿ ಅಂಬಾರಾಯ ಅವರು, ಈಗಾಗಲೇ ₹50 ಸಾವಿರ ಖರ್ಚು ಮಾಡಿ ಡಿಎಪಿ ಗೊಬ್ಬರ ಹಾಗೂ ಬೀಜ ಬಳಸಿ ಉದ್ದು ಬಿತ್ತನೆ ಮಾಡಲಾಗಿತ್ತು. ಆದರೆ ಮಳೆ ಬಾರದ ಹಿನ್ನೆಲೆಯಲ್ಲಿ ಬೆಳೆ ಸಂಪೂರ್ಣ ಹಾಳಾಗಿದೆ. ಇದೀಗ ನಾಲ್ಕು ಎಕರೆ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, ಇದೂ ಸಹ ಕೈಗೆ ಬರುವ ಸಾಧ್ಯತೆ ಕಡಿಮೆಯಾಗಿದೆ. ಹೀಗಾಗಿ ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ವಸತಿ ನಿಲಯಗಳ ಪರಿಶೀಲನೆಗೆ ಸೂಚನೆ:
ಜಿಲ್ಲೆಯ ವಸತಿ ನಿಲಯವೊಂದರಲ್ಲಿ ಕಳಪೆ ಆಹಾರ ಸೇವನೆಯಿಂದ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವ ಹಾಗೂ ನೈರ್ಮಲ್ಯದ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

ಕ್ಷೇತ್ರ ಭೇಟಿಯ ವೇಳೆ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಡಿಸಿಪಿ ಶಾಲು, ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಉಪನಿರ್ದೇಶಕ ಡಾ. ಬಾಲರಾಜ ಬಿರಾದಾರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೆರೆ ಭೋಸಗಾ ಗ್ರಾಮಕ್ಕೆ ಭೇಟಿ ನೀಡಿ ಸರ್ವೆ ನಂ.99/3ರಲ್ಲಿನ ಶಬ್ಬಿರ್ ಅಹ್ಮದ್ ಅವರು ಎರಡು ಬಾರಿ ತೊಗರಿ ಬಿತ್ತನೆ ಮಾಡಿರುವ ಪ್ರದೇಶವನ್ನು ವೀಕ್ಷಿಸಿದರು. ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸಚಿವರೊಂದಿಗೆ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button