ಜಿಲ್ಲಾಸುದ್ದಿ

ಮುಂದಿನ 10 ತಿಂಗಳ ಬರ ಪರಿಸ್ಥಿತಿ ಎದುರಿಸಲು ಕ್ರಿಯಾ ಯೋಜನೆ ರೂಪಿಸಿ: ಪ್ರಿಯಾಂಕ್ ಖರ್ಗೆ

ಕುಡಿಯುವ ನೀರು, ಮೇವು ಹಾಗೂ ಹೀಟ್‌ವೇವ್ ನಿರ್ವಹಣೆಗೆ ಅಧಿಕಾರಿಗಳಿಗೆ ಸಚಿವರ ಕಟ್ಟುನಿಟ್ಟಿನ ಸೂಚನೆ

ಕಲಬುರಗಿ, ಆ.10: ಸೂಪರ್ ಎಲ್‌ನಿನೋ ಪರಿಣಾಮದಿಂದ ರಾಜ್ಯದಲ್ಲಿ ಬರದ ಮುನ್ಸೂಚನೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 10 ತಿಂಗಳ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ (ಪ್ರಕೃತಿ ವಿಕೋಪ) ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಕೃಷಿ ಚಟುವಟಿಕೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಬರ ಪರಿಸ್ಥಿತಿ ಹಿಂದಿನ ಬರಗಾಲಕ್ಕಿಂತ ವಿಭಿನ್ನವಾಗಿದೆ. ಇನ್ನೂ ಮಳೆಗಾಲ ಪೂರ್ಣಗೊಂಡಿಲ್ಲದ ಕಾರಣ ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಬರ ಘೋಷಣೆ ಮಾಡಿಲ್ಲ. ಮುಂದಿನ ದಿನಗಳಲ್ಲೂ ಮಳೆ ಕೊರತೆ ಮುಂದುವರಿದು ಬರ ಘೋಷಣೆಯಾದಲ್ಲಿ ತಳಮಟ್ಟದಿಂದಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಸಿದ್ಧರಾಗಿರಬೇಕು ಎಂದರು.

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು ಸ್ಥಳ ಗುರುತಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು. ಚಿತ್ತಾಪುರ, ಸೇಡಂ ಹಾಗೂ ಚಿಂಚೋಳಿ ಭಾಗಗಳಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಅಧಿಕಾರಿಗಳು ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಆರೋಪಗಳಿವೆ. ಸಚಿವರಾಗಿರುವ ತಾನೇ ಸಾರ್ವಜನಿಕರ ಕರೆ ಸ್ವೀಕರಿಸಿ ಸಮಸ್ಯೆ ಆಲಿಸುತ್ತಿರುವಾಗ ಅಧಿಕಾರಿಗಳು ಏಕೆ ಸ್ಪಂದಿಸುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಮೊದಲ ಆದ್ಯತೆಯಲ್ಲಿ ಸ್ಪಂದಿಸುವ ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸುವ ಗುಣವನ್ನು ಅಧಿಕಾರಿಗಳು ಬೆಳೆಸಿಕೊಳ್ಳಬೇಕು ಎಂದರು.

ಹಿಂದಿನ ಬರಗಾಲದಲ್ಲಿ ನೀರು ಪೂರೈಸಿದ ಖಾಸಗಿ ಬೋರ್‌ವೆಲ್ ಮಾಲೀಕರಿಗೆ ಇನ್ನೂ ಹಣ ಪಾವತಿಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಹಿಂದಿನ ವರ್ಷದ ಬಾಕಿ ಪಾವತಿಯಾಗದಿದ್ದರೆ ಈಗ ಯಾರು ನೀರು ಪೂರೈಸಲು ಮುಂದೆ ಬರುತ್ತಾರೆ ಎಂದು ಪ್ರಶ್ನಿಸಿದರು. ಟಾಸ್ಕ್‌ಫೋರ್ಸ್ ಸಮಿತಿ ಆದೇಶದಂತೆ ಕಾರ್ಯನಿರ್ವಹಿಸುವುದರ ಜೊತೆಗೆ ಬಾಕಿ ಬಿಲ್‌ಗಳನ್ನು ತಕ್ಷಣ ಪಾವತಿಸಬೇಕು ಎಂದು ಸೂಚಿಸಿದರು.

ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಮೊದಲು ಬಾಡಿಗೆ ಬೋರ್‌ವೆಲ್ ಪಡೆದು, ಬಳಿಕ ಫ್ಲಶಿಂಗ್ ಮಾಡಬೇಕು. ಅದು ಸಾಧ್ಯವಾಗದಿದ್ದಲ್ಲಿ ಹೊಸ ಬೋರ್‌ವೆಲ್ ಕೊರೆಯಬೇಕು. ತಾವು ಈ ಹಿಂದೆ ಆರ್‌ಡಿಪಿಆರ್ ಸಚಿವರಾಗಿದ್ದಾಗ ನೀಡಿದ್ದ ಎಸ್‌ಒಪಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರು ಮಾತನಾಡಿ, ಜಿಲ್ಲೆಯ ಎಂಟು ತಾಲೂಕುಗಳ 35 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 41 ಗ್ರಾಮಗಳಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇದೆ. ಐದು ಟ್ಯಾಂಕರ್‌ಗಳ ಮೂಲಕ ಐದು ಗ್ರಾಮಗಳಿಗೆ ಹಾಗೂ ನಾಲ್ಕು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು 36 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬರದ ತೀವ್ರತೆ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ರಸಗೊಬ್ಬರ ಅಂಗಡಿಗಳಲ್ಲಿ ದರ, ದಾಸ್ತಾನು ಪ್ರದರ್ಶಿಸಲು ಸೂಚನೆ

ರಸಗೊಬ್ಬರ ಅಂಗಡಿಗಳಲ್ಲಿ ರೈತರಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಇದಕ್ಕೆ ಅವಕಾಶ ನೀಡದಂತೆ ಪ್ರತಿ ಅಂಗಡಿಯ ಮುಂದೆ ಪ್ರತಿದಿನದ ದಾಸ್ತಾನು ಹಾಗೂ ರಸಗೊಬ್ಬರದ ದರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಕೃಷಿ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳನ್ನು ನಿರಂತರವಾಗಿ ಪರಿಶೀಲಿಸಬೇಕು. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಿಯಮ ಉಲ್ಲಂಘಿಸಿದ ಏಳು ಅಂಗಡಿಗಳ ಅಮಾನತಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಆ.14ರೊಳಗೆ ಕುಡಿಯುವ ನೀರಿನ ಸಮಗ್ರ ವರದಿ

ಕಲಬುರಗಿ ನಗರದ ಸುಮಾರು 35 ವಾರ್ಡ್‌ಗಳಲ್ಲಿ ಇನ್ನೂ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ಶಾಸಕಿ ಕನೀಜ್ ಫಾತಿಮಾ ಸಚಿವರ ಗಮನಕ್ಕೆ ತಂದರು. ಜುಲೈ ಅಂತ್ಯದವರೆಗೆ ಟ್ಯಾಂಕರ್‌ಗಳ ಮೂಲಕ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿತ್ತು. ಆದರೆ ಆಗಸ್ಟ್ 1ರಿಂದ ಟ್ಯಾಂಕರ್ ನೀರು ಸ್ಥಗಿತಗೊಂಡಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮಾತನಾಡಿ, ಬೇಡಿಕೆ ಇರುವ ವಾರ್ಡ್‌ಗಳಿಗೆ ಪ್ರತಿದಿನ 50 ಟ್ರಿಪ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಎಲ್‌ ಆ್ಯಂಡ್‌ ಟಿ ಕಂಪನಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಸ್ಥಗಿತಗೊಳಿಸಿರುವುದರಿಂದ ಕೆಲವು ಬಡಾವಣೆಗಳಲ್ಲಿ ಸಮಸ್ಯೆ ಉಂಟಾಗಿದೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 50 ಟ್ಯಾಂಕರ್ ಟ್ರಿಪ್‌ಗಳು ಯಾವುದಕ್ಕೂ ಸಾಲುವುದಿಲ್ಲ. ಶಾಸಕರ ಸೂಚನೆಯಂತೆ ಅಗತ್ಯವಿರುವ ಪ್ರದೇಶಗಳಿಗೆ ನೀರು ಪೂರೈಸಬೇಕು. ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಮಗ್ರ ವರದಿಯನ್ನು ಆಗಸ್ಟ್ 14ರೊಳಗೆ ಸಲ್ಲಿಸಿದರೆ ಸರ್ಕಾರದ ಹಂತದಲ್ಲಿ ಹೆಚ್ಚಿನ ಅನುದಾನ ಪಡೆದು ಸಮಸ್ಯೆ ಪರಿಹರಿಸಲಾಗುವುದು ಎಂದರು. ನೀರು ಪೂರೈಸುವಲ್ಲಿ ವಿಫಲವಾಗಿರುವ ಎಲ್‌ ಆ್ಯಂಡ್‌ ಟಿ ಕಂಪನಿ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.

ಬೆಳೆ ಹಾನಿಗೆ ಮಧ್ಯಂತರ ಪರಿಹಾರ ನೀಡಲು ಒತ್ತಾಯ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹೆಸರು, ಉದ್ದು, ಸೋಯಾಬಿನ್ ಹಾಗೂ ತೊಗರಿ ಬೆಳೆಗಳು ಹಾನಿಗೊಳಗಾಗಿವೆ. ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತರು ಡಿಎಪಿ ಖರೀದಿಸುವಾಗ ಇತರೆ ರಸಗೊಬ್ಬರಗಳನ್ನೂ ಕಡ್ಡಾಯವಾಗಿ ಖರೀದಿಸುವಂತೆ ಕೆಲವು ಅಂಗಡಿ ಮಾಲೀಕರು ಒತ್ತಾಯಿಸುತ್ತಿದ್ದಾರೆ. ಇದು ರೈತರ ಮೇಲೆ ಅನಗತ್ಯ ಆರ್ಥಿಕ ಹೊರೆಯಾಗಿದ್ದು, ಅಂತಹ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಈಗಾಗಲೇ 37,051 ರೈತರಿಗೆ ಮಧ್ಯಂತರ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಪೂರ್ವ ಜೂನ್ ಅಂತ್ಯದವರೆಗೆ ಶೇ.36ರಷ್ಟು ಹಾಗೂ ಜುಲೈ ಮತ್ತು ಆಗಸ್ಟ್‌ನಲ್ಲಿ ಶೇ.35ರಷ್ಟು ಮಳೆ ಕೊರತೆಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ 8.90 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ 5.37 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ ಎಂದು ತಿಳಿಸಿದರು.

ಬೆಳೆ ವಿಮೆ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದುವರೆಗೆ 4.52 ಲಕ್ಷ ರೈತರು ಸುಮಾರು 5.35 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಮದ್ ಪಟೇಲ್ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಹರವಾಳ, ಕಾಡಾ ಅಧ್ಯಕ್ಷ ಡಾ. ಅಬ್ದುಲ್ ರಶೀದ್, ಕಲಬುರಗಿ-ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ, ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್‌ಪಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button