ಶಿಕ್ಷಣ

ವಸತಿ ನಿಲಯಗಳಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಸಿಐಡಿ ತನಿಖೆಗೆ ಆಗ್ರಹ

ದಂಡೋತಿ, ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಘಟನೆ ಕುರಿತು ಧರಣಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕಲಬುರಗಿ, ಆ.11: ಜಿಲ್ಲೆಯ ದಂಡೋತಿ ಹಾಗೂ ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗಳ ಕುರಿತು ಸಿಐಡಿ ತನಿಖೆ ನಡೆಸಬೇಕು ಹಾಗೂ ಪರಿಶುದ್ಧ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೇಘರಾಜ್ ಕಠಾರೆ, ಮೊಹಮ್ಮದ್ ಜಮೀರುದ್ದೀನ್, ಲೈಲಾ ತೆಲೋಗಿ ಕರ್ಜಗಿ, ನರಸಮ್ಮ ಚಂದನಕೇರಾ, ಪರಶುರಾಮ ಹಡಲಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ವಸತಿ ಶಾಲೆಗಳಲ್ಲಿ ನಡೆದಿರುವ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಪ್ರಾಂಶುಪಾಲರು, ವಾರ್ಡನ್‌ಗಳ ಜೊತೆಗೆ ಅಡುಗೆ ಸಿಬ್ಬಂದಿಯನ್ನೂ ಸೇವೆಯಿಂದ ಅಮಾನತುಗೊಳಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜೂನ್ ತಿಂಗಳಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. 20ರಿಂದ 30 ಸಾವಿರ ರೂ.ವರೆಗೆ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿದ್ದು, ಇದರಿಂದ ಪ್ರವೇಶ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಅರ್ಹತೆಯನ್ನು ಪರಿಗಣಿಸದೆ ಹಣದ ಬೇಡಿಕೆ ಇಟ್ಟು ಪ್ರವೇಶ ನೀಡಲಾಗುತ್ತಿದೆ ಎಂದು ದೂರಿದರು.

ವಾರ್ಡನ್‌ಗಳು ಪ್ರಾಂಶುಪಾಲರಿಗೆ, ಪ್ರಾಂಶುಪಾಲರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು. ಈ ರೀತಿಯ ಭ್ರಷ್ಟಾಚಾರವೇ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆಹಾರದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿಯೂ ಅಕ್ರಮ ನಡೆದಿದೆ ಎಂದು ಪ್ರತಿಭಟನಾಕಾರರು ದೂರಿದರು. ಕಳೆದ ಐದು ವರ್ಷಗಳಿಂದ ಶಾರ್ಪ್ ಏಜೆನ್ಸಿಗೆ ಟೆಂಡರ್ ನೀಡಲಾಗುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳು ಟೆಂಡರ್ ನಿಯಮಗಳನ್ನು ಉಲ್ಲಂಘಿಸಿ ಲಂಚ ಪಡೆದು ಏಜೆನ್ಸಿಯನ್ನು ಮುಂದುವರಿಸುತ್ತಿದ್ದಾರೆ ಎಂದು ದೂರಿದರು.

ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಐದು ಮಂದಿ ಅಡುಗೆ ಸಿಬ್ಬಂದಿಯನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಒಂದು ಲಕ್ಷ ರೂ. ಲಂಚ ಪಡೆದು ನೇಮಕ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ದಂಡೋತಿ ಹಾಗೂ ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಡೆದ ವಿಷಪೂರಿತ ಆಹಾರ ಸೇವನೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯಾರ್ಥಿಗಳ ಸುರಕ್ಷತೆ, ಗುಣಮಟ್ಟದ ಆಹಾರ ಹಾಗೂ ವಸತಿ ಶಾಲೆಗಳಲ್ಲಿನ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button