ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಟನೆ
ಲಕಣಾಪೂರ, ಕೊಡಚಿ, ಮುದಬಳ್ ಬಿ.ಕೆ. ಹಾಗೂ ವರ್ಚನಳ್ಳಿ ಗ್ರಾಮಗಳಿಗೆ ಬಸ್ ಸೇವೆ ಕಲ್ಪಿಸಲು ಒತ್ತಾಯ

ತಾಲ್ಲೂಕಿನ ಹಲವು ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಬಳಿಕ ವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ಹಾಗೂ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ತಮ್ಮ ಸಮಸ್ಯೆಯನ್ನು ವಿವರಿಸಿದರು.
ಕಾಂಗ್ರೆಸ್ ಮುಖಂಡ ಸಕರೆಪ್ಪಗೌಡ ಪೊಲೀಸ್ ಪಾಟೀಲ್ ಹಾಗೂ ಯುವ ಮುಖಂಡ ಭೀಮು ಖಾದ್ಯಾಪೂರ್ ಪ್ರತಿಭಟನೆಯ ನೇತೃತ್ವ ವಹಿಸಿ, ಲಕಣಾಪೂರ, ಕೊಡಚಿ, ಮುದಬಳ್ ಬಿ.ಕೆ. ಮತ್ತು ವರ್ಚನಳ್ಳಿ ಗ್ರಾಮಗಳಿಗೆ ತುರ್ತಾಗಿ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ನಾಲ್ಕು ಗ್ರಾಮಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಮರ್ಪಕ ಬಸ್ ಸೇವೆಯ ಕೊರತೆಯಿಂದ ಪ್ರತಿದಿನ ಶಾಲೆ ಮತ್ತು ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದ ತಮ್ಮ ಶೈಕ್ಷಣಿಕ ವ್ಯಾಸಂಗಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರದಲ್ಲೇ ಬಸ್ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



