ಜಿಲ್ಲಾಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಬಲಿರಾಮ್ ವರ್ಗಾವಣೆಗೆ ಆಗ್ರಹ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆಗೆ ಭೀಮಶಕ್ತಿ ಜಿಲ್ಲಾ ಸಮಿತಿ ಒತ್ತಾಯ

ಬೀದರ್, ಆ.16: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಬಲಿರಾಮ್ ಅವರನ್ನು ಕೂಡಲೇ ಬೀದರ್ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಭೀಮಶಕ್ತಿ ಜಿಲ್ಲಾ ಸಮಿತಿ ಅಧ್ಯಕ್ಷ ಮುಕೇಶ್ ರಾಯ್ ಆಗ್ರಹಿಸಿದ್ದಾರೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಮನವಿ ಸಲ್ಲಿಸಿರುವ ಅವರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕ್ರೈಸ್ತ ಸಮುದಾಯದ ಸ್ಮಶಾನ ಭೂಮಿಯ ತಡೆಗೋಡೆ, ಶಾದಿ ಮಹಲ್, ಚರ್ಚ್ ನಿರ್ಮಾಣ ಹಾಗೂ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಮಂಜೂರಾಗುತ್ತಿದೆ. ಈ ಅನುದಾನವು ಉದ್ದೇಶಿತ ಕಾಮಗಾರಿಗಳಿಗೆ ಸಮರ್ಪಕವಾಗಿ ಬಳಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಮುಕೇಶ್ ರಾಯ್ ತಿಳಿಸಿದ್ದಾರೆ.

ಆದರೆ ಈ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವುದರಿಂದ ಅವ್ಯವಹಾರಗಳಿಗೆ ಅವಕಾಶವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಅಕ್ರಮಗಳ ಕುರಿತು ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಬಲಿರಾಮ್ ಅವರನ್ನು 15 ದಿನಗಳೊಳಗಾಗಿ ಬೀದರ್ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ವರ್ಗಾವಣೆ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದರೆ ಬೀದರ್ ಪ್ರವಾಸಿ ಮಂದಿರದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಸಂಜುಕುಮಾರ್ ಚಾಂಬೋಳ, ಕಾರ್ಯದರ್ಶಿ ಸುಜೀತ್ ವಾಘಮಾರೆ ಹಾಗೂ ಖಜಾಂಚಿ ರವಿ ಮೇತ್ರೆ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button