ಬ್ರಿಟಿಷರ ಎದೆ ನಡುಗಿಸಿದ ಕ್ರಾಂತಿಕಾರಿಗಳು: ತಹಸೀಲ್ದಾರ್ ಹಿರೇಮಠ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಇಂದಿನ ಪೀಳಿಗೆ ಮರೆಯಬಾರದು

ಚಿತ್ತಾಪುರ, ಆ.16: ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳು ತಮ್ಮ ಹೋರಾಟದ ಮೂಲಕ ಬ್ರಿಟಿಷರ ಎದೆ ನಡುಗಿಸಿದ್ದರು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ದೇಶವು ಸುದೀರ್ಘ ಹಾಗೂ ಪ್ರಾಚೀನ ಇತಿಹಾಸ ಹೊಂದಿದ್ದು, ನಮ್ಮ ಸಂಸ್ಕೃತಿ, ತತ್ವ ಮತ್ತು ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಸ್ವಾತಂತ್ರ್ಯಕ್ಕಾಗಿ ನಡೆದ ಆಧುನಿಕ ಹೋರಾಟದಲ್ಲಿ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದಾರೆ. ಭಾರತದ ಅಖಂಡತೆ ಹಾಗೂ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಡಿದ ಲಾಲಾ ಲಜಪತ್ ರಾಯ್, ಭಗತ್ ಸಿಂಗ್ ಸೇರಿದಂತೆ ಅನೇಕ ಕ್ರಾಂತಿಕಾರಿಗಳು ನಮಗೆ ಸ್ಫೂರ್ತಿಯಾಗಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನವನ್ನು ಇಂದಿನ ಪೀಳಿಗೆ ಎಂದಿಗೂ ಮರೆಯಬಾರದು ಎಂದು ಹೇಳಿದರು.
ವಿಜ್ಞಾನ–ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ್ ಮಾತನಾಡಿ, ಸ್ವಾತಂತ್ರ್ಯ ದೊರೆತ 80 ವರ್ಷಗಳ ಅವಧಿಯಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶವು ವಿಶ್ವವೇ ಗುರುತಿಸುವ ಮಟ್ಟಕ್ಕೆ ಬೆಳೆದಿದೆ ಎಂದರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ನಿರಂತರವಾಗಿ ಹೊಸ ಸಾಧನೆಗಳನ್ನು ಮಾಡುತ್ತಿದ್ದಾರೆ. ಈ ಎಲ್ಲಾ ಸಾಧನೆಗಳಿಂದ ಭಾರತ ಇಂದು ಬಲಿಷ್ಠ ರಾಷ್ಟ್ರವಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆ ಎತ್ತಿ ನಿಂತಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದ್ದು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲಿ
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಬುದ್ಧನ ಶಾಂತಿಯ ನಾಡು ಹಾಗೂ ಬಸವಣ್ಣನ ತತ್ವಗಳು ನಮಗೆ ಸಮಾನತೆಯ ಪಾಠ ಕಲಿಸಿವೆ. ಇದೇ ರೀತಿಯಲ್ಲಿ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದರು.
ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಹಾಪುರುಷರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರು, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ ಪಾಷಾ, ಪಿಡಬ್ಲ್ಯುಡಿ ಇಲಾಖೆಯ ಜೆಇ ಬಿ.ಕೆ. ಉಮೇಶ್, ಸಿಪಿಐ ಸಿ.ಎಸ್. ಪಾಟೀಲ, ಪಿಎಸ್‌ಐ ಮಂಜುನಾಥ ರೆಡ್ಡಿ, ಕೃಷಿ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ್ ಮಾನಕರೆ, ಒಕ್ಕೂಟದ ಹೂಬಳ್ಳಿ ಸಹಕಾರ ಸಂಘದ ಅಧ್ಯಕ್ಷ ದೇವೇಂದ್ರ ಅರಳಕಲ್, ಸಿಡಿಪಿಒ ಆರತಿ ತುಪ್ಪದ್, ಅಬಕಾರಿ ಪಿಎಸ್‌ಐ ವನಿತಾ ಹಿತ್ತಾಳೆ, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಪಂಡಿತ್ ಸಿಂಧೆ, ಪಂಚ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಪಶು ಇಲಾಖೆಯ ಮುಖ್ಯಾಧಿಕಾರಿ ಡಾ. ಶಂಕರ ಕಣ್ಣಿ ಸ್ವಾಗತಿಸಿದರು. ಶಿವಶರಣಪ್ಪ ಮಂಟಾಳೆ ವಂದಿಸಿದರು.



