ಜಿಲ್ಲಾಸುದ್ದಿ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಇಒ ಕಚೇರಿ ಮುಂದೆ ಸತ್ಯಾಗ್ರಹ

ಕಲಬುರಗಿ, ಆ.18: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಸಂಘದ ಅಧ್ಯಕ್ಷ ಎಂ.ಬಿ. ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ಜೈನೇಶಾನ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೌಕರರು, ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆ ಆಗದಿರುವುದರಿಂದ ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಸ್ತುತ ದೊರೆಯುತ್ತಿರುವ ವೇತನ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದಂತಹ ಮೂಲಭೂತ ಅಗತ್ಯಗಳಿಗೂ ಸಾಕಾಗುತ್ತಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ನೌಕರರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ಮೇ 22ರಂದು ವೇತನ ನಿಗದಿಪಡಿಸಿ ಹೊರಡಿಸಿರುವ ಆದೇಶದಂತೆ ಕೂಡಲೇ ವೇತನ ಬಿಡುಗಡೆ ಮಾಡಬೇಕು. ಈ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಶೀಲಿಸುವ ನೆಪದಲ್ಲಿ ವಿಳಂಬ ಮಾಡದೆ ನೌಕರರಿಗೆ ಅನುಕೂಲವಾಗುವಂತೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕರು ಹಾಗೂ ಕಸಗುಡಿಸುವ ಮಹಿಳೆಯರು ಕಳೆದ 1–2 ವರ್ಷಗಳಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಗ್ರಾಮ ಪಂಚಾಯಿತಿ ಮೂಲಕವೇ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್‌ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಹಾಗೂ ಸೇವಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

5 ವರ್ಷ ಸೇವೆ ಸಲ್ಲಿಸಿದ ನೌಕರರಿಗೆ ₹750, 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ₹4,500 ಹಾಗೂ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ₹3,000 ನೀಡುವ ಪ್ರಸ್ತಾವನೆ ಈಗಾಗಲೇ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದ್ದು, ಅದರಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

2017ರ ಅಕ್ಟೋಬರ್ 31ಕ್ಕೂ ಮುನ್ನ ನೇಮಕಗೊಂಡಿರುವ ಎಲ್ಲ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಏಕಕಾಲಕ್ಕೆ ಅನುಮೋದಿಸಬೇಕು. ಇಎಫ್‌ಎಂಎಸ್‌ಗಿಂತ ಮೊದಲು ಬಾಕಿ ಉಳಿದಿರುವ ವೇತನ ಕರವಸೂಲಾತಿಯಲ್ಲಿ ಶೇ.40ರಷ್ಟು ಸಿಬ್ಬಂದಿಗೆ ಪಾವತಿಸಬೇಕು. ಕರವಸೂಲಿಗಾರರು ಹಾಗೂ ಡಿಇಒ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕ ಹುದ್ದೆಗಳಿಗೆ ಅರ್ಹರಿಗೆ ನೇಮಕಾತಿ ನೀಡಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದ ಸಂದರ್ಭದಲ್ಲಿ ₹6 ಲಕ್ಷ ಇಡುಗಂಟು ನೀಡಬೇಕು. ತರಬೇತಿ ಪಡೆದ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಹಾಗೂ ಪ್ರತಿವರ್ಷದ ನವೀಕರಣ ಪದ್ಧತಿಯನ್ನು ರದ್ದುಪಡಿಸಿ 15ನೇ ಹಣಕಾಸಿನಲ್ಲಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಚಾಲಕನನ್ನು ನೇಮಿಸಿ ₹15 ಸಾವಿರ ವೇತನ ನಿಗದಿಪಡಿಸಬೇಕು. ಈಗಾಗಲೇ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಿರುವುದನ್ನು ಸ್ವಾಗತಿಸಿದ ನೌಕರರು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ, ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ ಹಾಗೂ ಸ್ವಚ್ಛತಾಗಾರರ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರೇಡ್-1 ಕಾರ್ಯದರ್ಶಿಗಳಿಂದ ಪಿಡಿಒ ಹುದ್ದೆಗೆ ರಾಜ್ಯಮಟ್ಟದಲ್ಲಿ ನೀಡಲಾಗುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲೇ ಮುಂಬಡ್ತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಿ, ಬಿಲ್ ಕಲೆಕ್ಟರ್ ಹಾಗೂ ಗುಮಾಸ್ತ ವೃಂದದಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಕೆಸಿಎಸ್‌ಆರ್ ನಿಯಮಾನುಸಾರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆಯ ಪಿಂಚಣಿ ಜಾರಿಗೊಳಿಸಬೇಕು. ಜನಸಂಖ್ಯೆ ಆಧಾರದ ಮೇಲೆ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಬೇಕು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಲ್ಲಿ ಶೇ.60ರಷ್ಟು ಸ್ಥಾನಗಳನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button