
ಕಲಬುರಗಿ, ಆ.18: ಗ್ರಂಥಾಲಯವು ಕೇವಲ ಪುಸ್ತಕಗಳ ಸಂಗ್ರಹಾಲಯವಲ್ಲ. ಅದು ಜ್ಞಾನ, ಚಿಂತನೆ ಹಾಗೂ ಜೀವನಪರ್ಯಂತ ಕಲಿಕೆಯ ಕೇಂದ್ರವಾಗಿದೆ ಎಂದು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಗ್ರಂಥಪಾಲಕ ಡಾ. ಪ್ರದೀಪ್‌ಕುಮಾರ್ ಡಿ. ಹೇಳಿದರು.
ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ಭಾರತೀಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ 134ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಇ-ಪುಸ್ತಕ, ಇ-ಜರ್ನಲ್, ದತ್ತಸಂಚಯ ಹಾಗೂ ವಿವಿಧ ಡಿಜಿಟಲ್ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆನ್‌ಲೈನ್ ಶೈಕ್ಷಣಿಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ದಶರಥ ಮೇತ್ರೆ ಮಾತನಾಡಿ, ವಿದ್ಯಾರ್ಥಿಗಳು ಪ್ರಮುಖ ಗ್ರಂಥಗಳನ್ನು ಓದುವ ಜೊತೆಗೆ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಖರೀದಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ನಿಯಮಿತವಾಗಿ ಗ್ರಂಥಾಲಯಕ್ಕೆ ಭೇಟಿ ನೀಡುವ ಮೂಲಕ ಓದುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವ್ಯವಹಾರ ಮತ್ತು ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಿಸಿದ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಕುರಿತು ಅರಿವು ಹೆಚ್ಚಿಸಿಕೊಳ್ಳಬಹುದು. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವತಂತ್ರ ಚಿಂತನಾ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ಸಕ್ರಿಯ ಓದು ಮತ್ತು ಸ್ವತಂತ್ರ ಚಿಂತನೆಯ ಅಭ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮವನ್ನು ಕಾಲೇಜಿನ ಗ್ರಂಥಪಾಲಕಿ ಡಾ. ದೈವತಾಬಾಯಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



