ನಗರಾಭಿವೃದ್ಧಿ ಪ್ರಾಧಿಕಾರದ ಸಿಎ ನಿವೇಶನಗಳ ಅಕ್ರಮ ದುರ್ಬಳಕೆ ಖಂಡಿಸಿ ಸೆ.1ರಿಂದ ಅನಿರ್ದಿಷ್ಟಾವಧಿ ಧರಣಿ: ನರಿಬೋಳ್
ಸಿಎ ನಿವೇಶನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ಆರೋಪ; ಲೀಸ್ ರದ್ದುಪಡಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಕಲಬುರಗಿ, ಆ.18: ನಗರಾಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಶಾಲೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಹಂಚಿಕೆ ಮಾಡಲಾಗಿದ್ದ ಸಿಎ ನಿವೇಶನಗಳನ್ನು ನಿಯಮಬಾಹಿರವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದನ್ನು ಖಂಡಿಸಿ, ಕೂಡಲೇ ಅಕ್ರಮ ಲೀಸ್ ರದ್ದುಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 1ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಶಾಲೆ ನಡೆಸಲು, ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಾಗೂ ಸಮುದಾಯ ಭವನ ನಿರ್ಮಿಸಲು ಹಂಚಿಕೆ ಮಾಡಲಾಗಿದ್ದ ಸಿಎ ನಿವೇಶನವನ್ನು ಪಡೆದ ಟ್ರಸ್ಟ್‌ವೊಂದು ಮೂಲ ಉದ್ದೇಶವನ್ನು ಸಂಪೂರ್ಣವಾಗಿ ಮರೆತು ನಿಯಮಬಾಹಿರವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ, ಲೀಸ್ ಆಸ್ತಿಯನ್ನು ಅಕ್ರಮವಾಗಿ ‘ಇ-ಖಾತೆ’ ಮಾಡಿಸಿಕೊಂಡಿರುವ ಟ್ರಸ್ಟ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದರ ಜೊತೆಗೆ ಲೀಸ್ ರದ್ದುಪಡಿಸಬೇಕು. ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ನಿವೇಶನಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಚಟುವಟಿಕೆಗಳಿಗೆ ಬಳಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಈ ಅಕ್ರಮದ ವಿರುದ್ಧ ಹಲವು ಬಾರಿ ದೂರು ಸಲ್ಲಿಸಿದ್ದರೂ ಕೂಡಾ ಆಯುಕ್ತರು ಕೇವಲ ನೋಟಿಸ್ ನೀಡಿ ಕೈತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಕಳೆದ ತಿಂಗಳು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ, ಒಂದು ತಿಂಗಳ ಕಾಲಾವಕಾಶ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಆಯುಕ್ತರು ಭರವಸೆ ನೀಡಿದ್ದರು. ಆದರೆ, ನೀಡಿದ ಭರವಸೆಯಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಇದೇ ವೇಳೆ ಬ್ರಹ್ಮಪುರ ಸರ್ವೆ ನಂ.70ರಲ್ಲಿ ಆಸ್ಪತ್ರೆ ಹಾಗೂ ಅಂಚೆ ಕಚೇರಿ ನಿರ್ಮಾಣಕ್ಕಾಗಿ ಮೀಸಲಿಟ್ಟಿದ್ದ ನಾಗರಿಕ ಸೌಲಭ್ಯ (ಸಿಎ) ನಿವೇಶನದಲ್ಲೂ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಕಾನೂನುಬಾಹಿರವಾಗಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ ಎಂದು ನರಿಬೋಳ್ ಆರೋಪಿಸಿದರು.
ಸಿಎ ನಿವೇಶನಗಳಲ್ಲಿ ನಡೆಯುತ್ತಿರುವ ಎಲ್ಲ ಅನಧಿಕೃತ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಗುತ್ತಿಗೆ ಕರಾರಿನ ನಿಯಮಗಳನ್ನು ಉಲ್ಲಂಘಿಸಿರುವ ಟ್ರಸ್ಟ್‌ಗೆ ನೀಡಿರುವ 30 ವರ್ಷಗಳ ಲೀಸ್ ಒಪ್ಪಂದವನ್ನು ರದ್ದುಪಡಿಸಿ ಆಸ್ತಿಯನ್ನು ಪ್ರಾಧಿಕಾರದ ವಶಕ್ಕೆ ಪಡೆಯಬೇಕು. ಪ್ರಾಧಿಕಾರದ ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಇ-ಖಾತೆ ಮಾಡಿಸಿಕೊಂಡಿರುವ ಟ್ರಸ್ಟ್‌ನ ಆಡಳಿತ ಮಂಡಳಿ ಹಾಗೂ ಇದಕ್ಕೆ ಸಹಕರಿಸಿದವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.
ಬ್ರಹ್ಮಪುರ ಸರ್ವೆ ನಂ.70ರಲ್ಲಿ ಆಸ್ಪತ್ರೆ ಮತ್ತು ಅಂಚೆ ಕಚೇರಿಗಾಗಿ ಮೀಸಲಿಟ್ಟಿರುವ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಕಲ್ಯಾಣ ಮಂಟಪದ ಕಾಮಗಾರಿಯನ್ನು ಕೂಡಲೇ ತಡೆಹಿಡಿಯಬೇಕು. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸಾಮೂಹಿಕ ನೇತೃತ್ವದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ನರಿಬೋಳ್ ತಿಳಿಸಿದರು.
ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಹುಚ್ಚೇಶ್ವರ ವಠಾರ, ಗ್ರಾಮೀಣಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರವಣಕುಮಾರ ಡಿ.ನಾಯಕ್, ರಾಮಸೇನೆ ಜಿಲ್ಲಾಧ್ಯಕ್ಷ ಮಹೇಶ್ ಕೆಂಭಾವಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.



