ಜಿಲ್ಲಾಸುದ್ದಿ

ಆಗಸ್ಟ್‌ನಲ್ಲೇ ಅಂಬೇಡ್ಕರ್ ಭವನ ಉದ್ಘಾಟಿಸದಿದ್ದರೆ ಸೆ. 8ರಂದು ಪ್ರತಿಭಟನೆ

ಅಂಬೇಡ್ಕರ್ ಭವನ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ; ₹2.70 ಕೋಟಿ ಹೆಚ್ಚುವರಿ ಅನುದಾನದ ಕುರಿತು ತನಿಖೆಗೆ ಆಗ್ರಹ

ಕಲಬುರಗಿ, ಆ. 19: ನಗರದ ಸೇಡಂ ರಸ್ತೆಯಲ್ಲಿರುವ ಬೃಹತ್ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಗೊಂಡು ಹಲವು ವರ್ಷಗಳಾದರೂ ಇದುವರೆಗೆ ಉದ್ಘಾಟನೆ ಮಾಡದಿರುವುದನ್ನು ಖಂಡಿಸಿ, ಆಗಸ್ಟ್ ತಿಂಗಳಲ್ಲೇ ಭವನವನ್ನು ಉದ್ಘಾಟಿಸಬೇಕು. ಇಲ್ಲದಿದ್ದರೆ ಸೆಪ್ಟೆಂಬರ್ 8ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ್ ಎಸ್. ಫರತಾಬಾದ್ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೂಡಲೇ ನಿರ್ವಹಣಾ ಸಮಿತಿಯನ್ನು ರಚಿಸಿ ಅಂಬೇಡ್ಕರ್ ಭವನವನ್ನು ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಮಾಡಬೇಕು ಎಂದು ಒತ್ತಾಯಿಸಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇನ್ನೂ ₹2.70 ಕೋಟಿ ಅಗತ್ಯವಿದೆ ಎಂದು ಹೇಳಲಾಗುತ್ತಿದ್ದು, ಕಾಮಗಾರಿಯಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆಸಿರುವ ಬಗ್ಗೆ ಅನುಮಾನಗಳಿವೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಹಿಂದೆ ಎರಡು ಬಾರಿ ಹೋರಾಟ ನಡೆಸಿ, ರಾಜ್ಯದ ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್ ಭವನದ ಕಾಮಗಾರಿ 2012ರಿಂದ ಆರಂಭವಾಗಿ ಇದುವರೆಗೆ ಸುಮಾರು ₹8.75 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ ಎಂದು ತಿಳಿಸಿದರು. ಭವನವನ್ನು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಭವನದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿದಾಗ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತಿಳಿಸಿರುವುದಾಗಿ ಹೇಳಿದರು.

ಇನ್ನೂ ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ₹2.70 ಕೋಟಿ ಅಗತ್ಯವಿದೆ ಎಂದು ತಿಳಿಸಲಾಗಿದೆ. ಈ ಹೆಚ್ಚುವರಿ ಅನುದಾನದ ವಿಚಾರದಲ್ಲಿ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಸಚಿನ್ ಫರತಾಬಾದ್ ಒತ್ತಾಯಿಸಿದರು.

ಶಾಸಕ ಬಸವರಾಜ ಮತ್ತಿಮೂಡ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾದರೂ ಅಂಬೇಡ್ಕರ್ ಭವನದ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಬಳಕೆ ಪ್ರಮಾಣಪತ್ರ ಪರಿಶೀಲಿಸಿದರೆ ಕಾಮಗಾರಿ ₹8.57 ಕೋಟಿಯಲ್ಲೇ ಪೂರ್ಣಗೊಂಡಿರುವುದು ಕಂಡುಬರುತ್ತದೆ. ಆದಾಗ್ಯೂ ಹೆಚ್ಚುವರಿಯಾಗಿ ₹2.70 ಕೋಟಿ ಅನುದಾನ ಬಿಡುಗಡೆ ಮಾಡುವ ಮಂಜೂರಾತಿ ಪತ್ರವೂ ದೊರೆತಿದೆ ಎಂದು ಆರೋಪಿಸಿದರು.

ಹೀಗಾಗಿ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಅವ್ಯವಹಾರ ನಡೆದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಗಸ್ಟ್ ತಿಂಗಳಲ್ಲೇ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು. ಇಲ್ಲವಾದರೆ ಸೆಪ್ಟೆಂಬರ್ 8ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಸಚಿನ್ ಎಸ್. ಫರತಾಬಾದ್ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಹ್ಲಾದ್ ಮಠಮಾರಿ, ಮಲ್ಲಿಕಾರ್ಜುನ ಕೊಡಲಿ, ಸುರೇಶ್ ಹನಗುಡಿ, ಅಣವೀರ ಪಾಟೀಲ್, ಗುಂಡುಸಿಂಗ್, ಪಿಂಟು ಜಮಾದಾರ್, ಮಲ್ಲು, ದರ್ಶನ್, ವೆಂಕಟೇಶ್ ಜಮಾದಾರ್, ಶ್ರೀಮಂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button