ಶಿಕ್ಷಣಸಮಾಜ

ಆ.22ರಂದು ಕಲಬುರಗಿಯಲ್ಲಿ ಮೂರು ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ

ಕಲಬುರಗಿ, ಆ.19: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.22ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸೇಡಂ ರಸ್ತೆಯಲ್ಲಿರುವ ಹಳೆಯ ಆರ್‌ಟಿಒ ಕಚೇರಿ ಎದುರಿನ ಎಂಆರ್‌ಎಂಸಿ ಸ್ಯಾಕ್ಸ್ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ರಾಜ್ಯದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮಾರಂಭವನ್ನು ಉದ್ಘಾಟಿಸಲಿದ್ದು, ಚಿತ್ತಾಪುರದ ಸೋಮಶೇಖರ್ ಶಿವಾಚಾರ್ಯರ ಸಾನ್ನಿಧ್ಯ ಇರಲಿದೆ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಪ್ರೇರಣಾ ನುಡಿ ಆಡಲಿದ್ದಾರೆ ಎಂದರು.

ಅರ್ಹ ವಿದ್ಯಾರ್ಥಿಗಳ ನೋಂದಣಿ: ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ಮೂರು ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳು ಆ.22ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30ರೊಳಗೆ ಪೋಷಕರ ಅಥವಾ ತಮ್ಮ ಗುರುತಿನ ಚೀಟಿಯೊಂದಿಗೆ ಸಮಾರಂಭದ ಸ್ಥಳದಲ್ಲಿ ಹಾಜರಾಗಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಸಮಾರಂಭದಲ್ಲಿ ಭಾಗವಹಿಸಲು ಟೋಕನ್ ವಿತರಿಸಲಾಗುವುದು ಎಂದು ಬಸವರಾಜ ಬಳೂಂಡಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರಕಾಂತ ಏರಿ, ಪ್ರಕಾಶ ಉದನೂರು, ಧರ್ಮರಾಯ ಜವಳಿ, ಕೃಷ್ಣಾಚಾರ್ಯ, ಎಂ.ಬಿ. ಪಾಟೀಲ, ಸುರೇಶ್ ವಗ್ಗೆ, ಸಿದ್ದಲಿಂಗಯ್ಯ ಮಠಪತಿ, ಅಣ್ಣಾರಾವ್ ಹಾಬಾಳಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button