ರಾಜಕೀಯಸಾಹಿತ್ಯ

ಕಲಬುರಗಿಯಲ್ಲಿ ನಾಳೆ ಧೀಮಂತ ಧುರೀಣ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಗ್ರಂಥ ಬಿಡುಗಡೆ

ಆ.22ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಅದ್ದೂರಿ ಕಾರ್ಯಕ್ರಮ

ಕಲಬುರಗಿ, ಆ.20: ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಆ.22ರಂದು ಬೆಳಿಗ್ಗೆ 11 ಗಂಟೆಗೆ ಧೀಮಂತ ಧುರೀಣ, ಸಾಮಾಜಿಕ ನ್ಯಾಯ ಹಾಗೂ ಸರ್ವೋದಯದ ರಾಜಕೀಯ ಮುತ್ಸದ್ದಿ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಾದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸುಮೇಧ ಪ್ರಕಾಶನದ ದತ್ತಾತ್ರೇಯ ಈಕ್ಕಳಕಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಖದೇವ್ ಥೋರಾಟ್ ಅವರು ಇಂಗ್ಲಿಷ್‌ನಲ್ಲಿ ರಚಿಸಿರುವ ಹಾಗೂ ಚೇತನ ಶಿಂಧೆ ಬರೆದಿರುವ ಕೃತಿಯನ್ನು ರಾಹು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಅಭಿನಂದನಾ ಗ್ರಂಥವನ್ನು ಸುಮೇಧ ಪ್ರಕಾಶನದಿಂದ ಹೊರತರಲಾಗುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ನಟ ಹಾಗೂ ವಿಚಾರವಾದಿ ಪ್ರಕಾಶ್ ರಾಜ್ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಗೌರವ ಸನ್ಮಾನಿತರಾಗಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ರಾಧಾಬಾಯಿ ಎಂ. ಖರ್ಗೆ ಅವರು ಆಗಮಿಸಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಗ್ರಂಥದ ಕುರಿತು ಖಾಜಾ ಬಂದೇ ನವಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಜೆಟಿಯರ್ ಇಲಾಖೆಯ ಉಪನಿರ್ದೇಶಕ ವೀರಶೆಟ್ಟಿ ಗಾರಂಪಳ್ಳಿ ಮಾತನಾಡಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯದ ಗೃಹ ಹಾಗೂ ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಹಿಸಲಿದ್ದಾರೆ. ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಈಶ್ವರ ಖಂಡ್ರೆ, ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ಶಾಸಕರಾದ ಬಿ.ಆರ್. ಪಾಟೀಲ, ಅಲ್ಲಮಪ್ರಭು ಪಾಟೀಲ, ಶ್ರೀಮತಿ ಕನೀಜ್ ಫಾತಿಮಾ, ಎಂ.ವೈ. ಪಾಟೀಲ, ಜಗದೇವ ಗುತೇದಾರ್, ತಿಪ್ಪಣ್ಣಪ್ಪ ಕಮಕನೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಶೇಠ್, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಸುಭಾಷ್ ಎಲ್. ಶಿಕ್ಷಣಕರ್, ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರ ಅಭಿಮನ್ಯು ಶೃಂಗೇರಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಮ್ ನಾಟೀಕಾರ್, ಡಾ. ಲಕ್ಷ್ಮಣ ದಸ್ತಿ, ಪ್ರೊ. ಆರ್.ಕೆ. ಹುಡಗಿ, ಮಾರುತಿ ಗೋಖಲೆ, ಚಂದ್ರಕಾಂತ್ ಗದ್ದಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button