ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರ: ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಗೆ ಆಗ್ರಹ
ಬರಪೀಡಿತ ಪ್ರದೇಶಗಳಿಗೆ ತಕ್ಷಣ ಪರಿಹಾರ; ರೈತರ ಸಾಲಮನ್ನಾ, ಬೆಳೆ ವಿಮೆ ಬಿಡುಗಡೆಗೆ ಆಗ್ರಹ

ಕಲಬುರಗಿ, ಆ.20- ಕಲ್ಯಾಣ ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿರುವುದರಿಂದ ತೀವ್ರ ಬರಗಾಲ ಆವರಿಸಿದ್ದು, ಬರಪೀಡಿತ ಪ್ರದೇಶಗಳ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಕೂಡಲೇ ಸಚಿವ ಸಂಪುಟ ಸಭೆ ಕರೆಯಬೇಕು ಎಂದು ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರು ಬರದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸೆಪ್ಟೆಂಬರ್ 17ರ ಸಮೀಪದಲ್ಲಿ ಈ ಭಾಗದಲ್ಲಿ ಒಂದು ದಿನದ ಸಚಿವ ಸಂಪುಟ ಸಭೆ ನಡೆಸಿ, ಇಲ್ಲಿನ ರೈತರ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಳೆದ ಹಲವು ವರ್ಷಗಳಿಂದ ರೈತರು ಮಳೆಯ ಏರುಪೇರುಗಳಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು ಮೂರು ವರ್ಷಗಳ ಹಿಂದೆ ಈ ಭಾಗದಲ್ಲಿ ಅತಿಯಾದ ಮಳೆಯಿಂದಾಗಿ ಬೆಳೆ ಹಾನಿಯಾಗಿತ್ತು. ನಂತರ ಮಳೆಯ ಅಭಾವ ಹಾಗೂ ಕಳೆದ ವರ್ಷ ಅತಿಯಾದ ಮಳೆಯಿಂದ ರೈತರ ಹಲವು ಬೆಳೆಗಳು ನಾಶವಾಗಿ ಆರ್ಥಿಕ ಸಂಕಷ್ಟ ಎದುರಾಯಿತು.
ಪ್ರಸ್ತುತ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲದ ಹೊರೆ ತಾಳಲಾರದೆ ಅನೇಕ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದಯಾನಂದ ಪಾಟೀಲ ಹೇಳಿದರು.
ಕೂಡಲೇ ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಉಳಿದಿರುವ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬರದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಕಲ್ಯಾಣ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಸಮಗ್ರವಾಗಿ ಚರ್ಚಿಸಿ ರೈತಪರ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸುರೇಶ ಗುತೇದಾರ, ಯುವ ಅಧ್ಯಕ್ಷ ಶಿವರುದ್ರಯ್ಯ ಎಸ್. ಹಿರೇಮಠ, ಮಹಿಳಾ ಘಟಕದ ಜಿಲ್ಲಾ ಯುವ ಅಧ್ಯಕ್ಷೆ ನಿರ್ಮಲಾ ಚೌಧರಿ, ಶಿವಾನಂದ ಮಠಪತಿ, ಅಮರ ರಜುಳಕಿ, ನಾಗೇಂದ್ರಪ್ಪ ಆರ್. ದಂಡೋತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



