ಜಿಲ್ಲಾಸುದ್ದಿ

ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬಸ್ ನಿಲ್ದಾಣ, ಎಪಿಎಂಸಿಯಲ್ಲಿ ಪ್ರತಿಭಟನೆ ಬಿಸಿ; ಬರ ಪರಿಹಾರ, ಸಾಲ ಮನ್ನಾ, ಬೆಳೆ ವಿಮೆಗೆ ಆಗ್ರಹ

ಕಲಬುರಗಿ, ಆ.20: ಮುಂಗಾರು ಮಳೆ ವಿಫಲಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು, ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಯುಕ್ತ ಹೋರಾಟ ಕರ್ನಾಟಕ ಸಂಘಟಕರು ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ವಿವಿಧ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಬೆಳಿಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬಸ್‌ಗಳನ್ನು ತಡೆದ ಹಿನ್ನೆಲೆಯಲ್ಲಿ ಕೆಲಕಾಲ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣದ ಮಾರ್ಗದಲ್ಲಿಯೂ ವಾಹನಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದರು.

ಬಂದ್‌ಗೆ ಬಸ್ ನಿಲ್ದಾಣದ ಸುತ್ತಮುತ್ತ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಕೇಂದ್ರ ಬಸ್ ನಿಲ್ದಾಣದಿಂದ ಎಂಎಸ್‌ಕೆ ಮಿಲ್ ಮಾರ್ಗ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರದೇಶದಲ್ಲಿಯೂ ಅಡತ ಅಂಗಡಿಗಳು ಬಂದ್ ಆಗಿದ್ದವು. ಪರಿಣಾಮ ಬೆಳಗಿನ ವೇಳೆಯಲ್ಲಿ ಈ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.

ಆದರೆ ಮಧ್ಯಾಹ್ನದ ಬಳಿಕ ಪ್ರತಿಭಟನೆಯ ಬಿಸಿ ಕಡಿಮೆಯಾಗಿದ್ದು, ಅಂಗಡಿ-ಮುಂಗಟ್ಟುಗಳು ಎಂದಿನಂತೆ ಪುನಃ ಆರಂಭವಾದವು. ಬೆಳಗ್ಗೆ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಕೆಲಕಾಲ ಪರದಾಡಿದರು. ಆದಾಗ್ಯೂ, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು.

ಬರದ ಕುರಿತು ಚರ್ಚಿಸಿ ಪರಿಹಾರ ನೀಡಲು ಆಗ್ರಹ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳು ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪವನ್ನು ವ್ಯರ್ಥ ಮಾಡುತ್ತಿವೆ. ಬರಗಾಲದ ಕುರಿತು ಕೂಡಲೇ ಚರ್ಚೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲೆಯನ್ನು ಭೀಕರ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಜೂನ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ ಹಾಗೂ ಕಬ್ಬು ಬೆಳೆಗಳು ಹಾನಿಗೀಡಾಗಿವೆ. ಬೆಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಎಲ್ಲ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು, ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಮಹಾರಾಷ್ಟ್ರದ ಪುಣೆ ಉಜನಿ ಆಣೆಕಟ್ಟಿನಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಅಂತರ್ಜಲ ಮಟ್ಟ ಕುಸಿದಿದ್ದು ಬೋರ್‌ವೆಲ್‌ಗಳು ಮತ್ತು ಬಾವಿಗಳು ಬತ್ತಿವೆ. ಕಬ್ಬು ಒಣಗುತ್ತಿದ್ದು, ನದಿಗಳಲ್ಲಿಯೂ ನೀರಿನ ಕೊರತೆ ಎದುರಾಗಿದೆ. ಹೀಗಾಗಿ ಕೂಡಲೇ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿದರು.

ಶುದ್ಧ ಕುಡಿಯುವ ನೀರು, ಪಿಂಚಣಿ ಬಿಡುಗಡೆಗೆ ಒತ್ತಾಯ

ನಗರದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎನ್‌ಆಂಡ್‌ಟಿ ಕಂಪನಿಯ ವಿರುದ್ಧ ಕ್ರಮ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಆಗ್ರಹಿಸಲಾಯಿತು. ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ವೇತನ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ಪೂರೈಸಬೇಕು ಹಾಗೂ ಬೆಂಬಲ ಬೆಲೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದತ್ತ ಹಾಗೂ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದತ್ತ ಬೆರಳು ತೋರಿಸುತ್ತಾ ಪರಿಹಾರ ಕ್ರಮಗಳಿಂದ ನುಣುಚಿಕೊಳ್ಳುತ್ತಿದೆ. ಕೂಡಲೇ ರಾಜ್ಯ ಸರ್ಕಾರವು ಕೇಂದ್ರದ ಬಳಿಗೆ ನಿಯೋಗ ಕೊಂಡೊಯ್ದು, ಬರ ಪರಿಹಾರ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸಚಿನ್ ಎಸ್. ಫರತಾಬಾದ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸಂದೀಪ್ ಭರಣಿ, ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ಎನ್. ದೇಗಾಂವ್, ಭೀಮಾಶಂಕರ್ ಮಾಡಿಯಾಳ್, ಮೌಲಾಮುಲ್ಲಾ, ಆನಂದ್ ದೊಡ್ಡಮನಿ, ಗೋಪಾಲ್ ನಾಟೀಕಾರ್, ನಂದಕುಮಾರ್ ನಾಗಭುಜಂಗ, ಕರೆಪ್ಪ ಕರಗೊಂಡ, ಎಂ.ಬಿ. ಸಜ್ಜನ್, ಪದ್ಮಿನಿ ಕಿರಣಗಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button