ಸಚಿವ ಬಿ. ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಧರಣಿ 4ನೇ ದಿನಕ್ಕೆ: ಉತ್ತರ ಬಿಜೆಪಿ ಪ್ರತಿಭಟನೆ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ; ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸುವಂತೆ ಒತ್ತಾಯ

ಕಲಬುರಗಿ, ಆ.20: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ನಾಲ್ಕನೇ ದಿನಕ್ಕೆ ಮುಂದುವರಿಯಿತು. ಉತ್ತರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉಮೇಶ್ ಪಾಟೀಲ್, ವರದಾಶಂಕರ್ ಶೆಟ್ಟಿ, ಮಂಜುನಾಥ ಚಿಲಶೆಟ್ಟಿ, ವಿಜಯ್ ಬಿಕೆ, ಸಂತೋಷ್, ಶರಣು ಡಿಗ್ಗಿ, ಜಯಶ್ರೀ ಮುಚಳಂಬೆ, ಸವಿತಾ ಪಾಟೀಲ್, ರಾಜೇಶ್ವರಿ ಮೈತ್ರಿ, ಪ್ರಭಾವತಿ ದೊಡ್ಡಮನಿ, ಮೀನಾಕ್ಷಿ ಶೆಟ್ಟಿ, ಜಗದೇವಿ ನಿಲೇಗಾರ್, ಲಲಿತ್ ಜಾಧವ್, ಶಾಂತಾಬಾಯಿ ಮಠಪತಿ, ಮಾನಕರ್, ಸಿದ್ದಮ್ಮ ಕಲಶೆಟ್ಟಿ, ವಿಜಯಲಕ್ಷ್ಮಿ, ಅಕ್ಕಮ್ಮ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
2024ರಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಇರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು ₹187 ಕೋಟಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆ ಸಂದರ್ಭದಲ್ಲಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ನಡೆಯುತ್ತಿದ್ದು, ಬಿ. ನಾಗೇಂದ್ರ ಅವರ ಹೆಸರು ಕೂಡ ಆರೋಪಪಟ್ಟಿಯಲ್ಲಿ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತನಿಖೆಯ ವೇಳೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದರು. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ₹20.19 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ ಎಂಬ ಆರೋಪವಿದ್ದು, ಸುಮಾರು ₹29.96 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ₹16.33 ಕೋಟಿ ನಗದು, ₹16.25 ಕೆ.ಜಿ. ಚಿನ್ನ ಹಾಗೂ ₹4.51 ಕೋಟಿ ಮೌಲ್ಯದ ಇತರೆ ವಸ್ತುಗಳು ಸೇರಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಬಿ. ನಾಗೇಂದ್ರ ಅವರ ವಿರುದ್ಧ ಒಟ್ಟು 31 ಪ್ರಕರಣಗಳಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಾರ್ವಜನಿಕ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಾದ ಸಚಿವರ ವಿರುದ್ಧ ಇಷ್ಟೊಂದು ಗಂಭೀರ ಆರೋಪಗಳಿರುವ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವುದು ಖಂಡನೀಯ ಎಂದರು.
ಈ ಹಿಂದೆ ಇದೇ ಪ್ರಕರಣದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರು 2024ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇದೀಗ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.



