ಉದ್ಯೋಗಕಲ್ಯಾಣ ಕರ್ನಾಟಕರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿಯ ವೇತನ ನೀಡಬೇಕು: ಸಿ.ಎಸ್. ಷಡಾಕ್ಷರಿ

371(ಜೆ) ಸಮರ್ಪಕ ಅನುಷ್ಠಾನವಾಗದೆ ಕಲ್ಯಾಣ ಕರ್ನಾಟಕದ ನೌಕರರಿಗೆ ಬಡ್ತಿಯಲ್ಲಿ ಅನ್ಯಾಯ: ಶಶೀಲ್ ಜಿ. ನಮೋಶಿ

ಕಲಬುರಗಿ, ಆ.22: ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರದ ಮಾದರಿಯ ವೇತನ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯಿಸಿದರು.

ನಗರದ ಎಂಆರ್‌ಎಂಸಿ ಸ್ಯಾಕ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ 22 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ವ್ಯವಸ್ಥೆ ಜಾರಿಯಲ್ಲಿದೆ. ಹಿಂದುಳಿದ ಬಿಹಾರದಲ್ಲೂ ಈ ವ್ಯವಸ್ಥೆ ಅನುಷ್ಠಾನಗೊಂಡಿದೆ. ಆದರೆ, ಎಲ್ಲ ಕ್ಷೇತ್ರಗಳಲ್ಲಿಯೂ ಮುಂದುವರಿದಿರುವ ಕರ್ನಾಟಕದಲ್ಲಿ ಇನ್ನೂ ಕೇಂದ್ರ ಮಾದರಿಯ ವೇತನ ಜಾರಿಯಾಗಿಲ್ಲ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸುಮಾರು 2.93 ಲಕ್ಷ ಎನ್‌ಪಿಎಸ್ ನೌಕರರಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಭರವಸೆ ನೀಡಿದ್ದಾರೆ. ಅದನ್ನು ಈಡೇರಿಸುವ ವಿಶ್ವಾಸವಿದೆ. ನೌಕರರು ಸುಧಾರಣೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಹೊಸತನಕ್ಕೆ ತೆರೆದುಕೊಳ್ಳಬೇಕು ಎಂದರು.

ಕೃತಕ ಬುದ್ಧಿಮತ್ತೆ (ಎಐ) ಬಳಕೆ ಹೆಚ್ಚುತ್ತಿರುವುದರಿಂದ ಸಾಕಷ್ಟು ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ ಪ್ರತಿವರ್ಷ ಸುಮಾರು 1.20 ಕೋಟಿ ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದು ಉದ್ಯೋಗ ಮಾರುಕಟ್ಟೆಗೆ ಬರುತ್ತಿದ್ದಾರೆ. ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ. ಜನಸಂಖ್ಯೆ ನಿಯಂತ್ರಣದ ಕುರಿತು ಗಂಭೀರ ಚಿಂತನೆ ಅಗತ್ಯವಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.19ರಷ್ಟು ಪಾಲು ಹೊಂದಿರುವ ಕಲ್ಯಾಣ ಕರ್ನಾಟಕದ ನೌಕರರು ಸರ್ಕಾರಿ ಸೇವೆಯಲ್ಲಿ ಕೇವಲ ಶೇ.4ರಷ್ಟಿದ್ದಾರೆ. ಈ ಅಂತರಕ್ಕೆ 371(ಜೆ) ಸಮರ್ಪಕವಾಗಿ ಅನುಷ್ಠಾನಗೊಳ್ಳದಿರುವುದೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿಯೂ ತೀವ್ರ ಅನ್ಯಾಯವಾಗುತ್ತಿದೆ. 1997ರಲ್ಲಿ ಶಿಕ್ಷಕರಾಗಿ ನೇಮಕಗೊಂಡ ಕೆಲವರಿಗೆ ಇನ್ನೂ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ದೊರೆತಿಲ್ಲ. ಆದರೆ, ಇತರ ಭಾಗಗಳಲ್ಲಿ 2000ರಲ್ಲಿ ಶಿಕ್ಷಕರಾದವರು ಈಗಾಗಲೇ ಮುಖ್ಯ ಶಿಕ್ಷಕರಾಗಿದ್ದಾರೆ. ಈ ಅಸಮಾನತೆಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ನೌಕರರ ಜವಾಬ್ದಾರಿಗಳು ಹಾಗೂ ಸಮಸ್ಯೆಗಳು ಹೆಚ್ಚಾಗಿವೆ. ಹಾಜರಾತಿ ನಿರ್ವಹಣಾ ವ್ಯವಸ್ಥೆ ಸೇರಿದಂತೆ ವಿವಿಧ ಹೊಸ ವ್ಯವಸ್ಥೆಗಳು ಜಾರಿಯಾಗಿರುವ ಹಿನ್ನೆಲೆಯಲ್ಲಿ ಕೆಲ ನೌಕರರು ಬಡ್ತಿ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ನೌಕರರು ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರಬೇಕು ಎಂದರು.

ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಮಾತನಾಡಿ, ಸರ್ಕಾರಿ ನೌಕರರ ಜೀವನವು ಹಲವು ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ಸರ್ಕಾರಿ ಸೇವೆಯಲ್ಲಿರುವವರು ತಮ್ಮ ಕೇಂದ್ರ ಸ್ಥಾನವನ್ನು ಬಿಡಬಾರದು. ಕೆಲವು ವೈಯಕ್ತಿಕ ವಸ್ತುಗಳ ಖರೀದಿಗೂ ಅನುಮತಿ ಪಡೆಯಬೇಕಾದಂತಹ ನಿಯಮಗಳಿವೆ. ಯುವಕರು ಸರ್ಕಾರಿ ನೌಕರಿಯನ್ನು ಮೊದಲ ಆಯ್ಕೆಯಾಗಿ ಪರಿಗಣಿಸುವ ಬದಲು ಇತರ ಅವಕಾಶಗಳ ಬಗ್ಗೆಯೂ ಚಿಂತಿಸಬೇಕು ಎಂದು ಸಲಹೆ ನೀಡಿದರು.

ಗ್ರೂಪ್‌ ‘ಬಿ’ಗಿಂತ ಕೆಳಗಿನ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಹಲವು ರೀತಿಯ ಶೋಷಣೆಗೆ ಒಳಗಾಗುತ್ತಿದ್ದಾರೆ. ಜಿಲ್ಲಾಡಳಿತದ ಕಾರ್ಯನಿರ್ವಹಣೆಗೆ ಅವರ ಕೊಡುಗೆ ಮಹತ್ವದ್ದಾಗಿದ್ದರೂ ಅವರ ಸಮಸ್ಯೆಗಳು ಮುಂದುವರಿದಿವೆ. ಸರ್ಕಾರಿ ಉದ್ಯೋಗದ ಕನಸು ಕಾಣುವವರು ಗ್ರೂಪ್‌ ‘ಸಿ’ ಹುದ್ದೆಯ ಆಯ್ಕೆಯ ಬಗ್ಗೆಯೂ ಎಚ್ಚರಿಕೆಯಿಂದ ಚಿಂತಿಸಬೇಕು ಎಂದು ಹೇಳಿದರು.

ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. 2025–26ನೇ ಸಾಲಿನಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜು, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಹಿರಿಯ ಉಪಾಧ್ಯಕ್ಷ ಸೋಮಶೇಖರಯ್ಯ, ಬೀದರ್ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ಯಾದಗಿರಿ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಜಿ. ಹುಡೇದ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಂದಿನಿ ಸನಬಾಳ್, ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜ್ ರಾಜೀವ್, ಖಜಾಂಚಿ ವಿ.ವಿ. ಶಿವರುದ್ರಯ್ಯ, ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ಏರಿ, ಜಿಲ್ಲಾ ಖಜಾಂಚಿ ಶ್ರೀಮಂತ್ ಪಟ್ಟದಾರ್, ಜಿಲ್ಲಾ ಪರಿಷತ್ ಸದಸ್ಯ ಧರ್ಮರಾಜ್ ಜವಳಿ, ರಾಜ್ಯ ಜಂಟಿ ಕಾರ್ಯದರ್ಶಿ ಅಣವೀರ್, ಜಿಲ್ಲಾ ಜಂಟಿ ಕಾರ್ಯದರ್ಶಿ ರಾಜರತ್ನ ಡಿ.ಕೆ., ಸಂಘಟನಾ ಕಾರ್ಯದರ್ಶಿ ವೆಸ್ಲಿ ವೇದರಾಜ್, ಪ್ರಕಾಶ ಉದನೂರ ಸೇರಿದಂತೆ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ವಿವಿಧ ಪದಾಧಿಕಾರಿಗಳು, ನಿರ್ದೇಶಕರು ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪಾಲಕರು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button