
ಕಲಬುರಗಿ, ಆ.22: ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವ ಉದ್ದೇಶದಿಂದ ಒಂದು ತಿಂಗಳ ಕಾಲ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ. ನಮೋಶಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ಶ್ರೀ ಗಂಗಾಧರ ನಮೋಶಿ ಅವರ ಸ್ಮರಣಾರ್ಥ ಎನ್‌ಎಸ್‌ಎಸ್ ಕರಿಯರ್ ಅಕಾಡೆಮಿ ಸಹಭಾಗಿತ್ವದಲ್ಲಿ ವಿವಿಧ ವಿಷಯ ಪರಿಣಿತರಿಂದ ನಿರಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಈಗಾಗಲೇ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಬಿ.ಎಡ್. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಒಂದು ತಿಂಗಳ ಅವಧಿಯಲ್ಲಿ ಪ್ರತಿದಿನ ನಿಗದಿತ ವೇಳಾಪಟ್ಟಿಯಂತೆ ತರಗತಿಗಳು ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮಗ್ರ ಮಾರ್ಗದರ್ಶನ, ವಿಷಯವಾರು ಬೋಧನೆ ಹಾಗೂ ಪರೀಕ್ಷಾ ಸಿದ್ಧತೆಗೆ ಅಗತ್ಯವಾದ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದು, ಅವರ ಪ್ರತಿಭೆಯನ್ನು ಗುರುತಿಸಿ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವುದು ಹಾಗೂ ಉತ್ತಮ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅಗತ್ಯವಾದ ಮಾರ್ಗದರ್ಶನ ಒದಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸಲು ಅನುಭವಿ ಉಪನ್ಯಾಸಕರು ಹಾಗೂ ವಿಷಯ ತಜ್ಞರಿಂದ ತರಬೇತಿ ನೀಡಲಾಗುವುದು. ಸಂಪೂರ್ಣ ಉಚಿತವಾಗಿ ಮತ್ತು ಗುಣಮಟ್ಟದ ತರಬೇತಿ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಮಾಡುವ ಆಶಯ ಹೊಂದಿದ್ದೇವೆ ಎಂದು ಶಶೀಲ್ ಜಿ. ನಮೋಶಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ನಿರ್ದೇಶಕ ಮಲ್ಲಿಕಾರ್ಜುನ ಬುಳ್ಳಾ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೀರಣ್ಣ ಪೂಜಾರಿ ಉಪಸ್ಥಿತರಿದ್ದರು.



