ಜಿಲ್ಲಾಸುದ್ದಿಶಿಕ್ಷಣ

ವಸತಿ ಶಾಲೆಯ ಮಕ್ಕಳೊಂದಿಗೆ ಗೂಗಲ್ ಮೀಟ್: ಆಹಾರದ ಗುಣಮಟ್ಟಕ್ಕೆ ಡಿ.ಸಿ.ಯಿಂದ ನೇರ ಫೀಡ್‌ಬ್ಯಾಕ್

ಮಕ್ಕಳ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಇಕ್ರಂ ಶರೀಫ್; ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ

ಕಲಬುರಗಿ, ಆ.26: ಜಿಲ್ಲೆಯ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಊಟದ ಗುಣಮಟ್ಟ ಹಾಗೂ ಶಾಲೆಗಳಲ್ಲಿನ ಮೂಲಸೌಕರ್ಯಗಳ ಕುರಿತು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಶಾಲಾ ಮಕ್ಕಳಿಂದಲೇ ನೇರವಾಗಿ ಮಾಹಿತಿ ಪಡೆದುಕೊಂಡರು.

ಮಂಗಳವಾರ ಸಮಾಜ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಆಯ್ದ ಸುಮಾರು 15 ವಸತಿ ಶಾಲೆಗಳ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಗೂಗಲ್ ಮೀಟ್ ಮೂಲಕ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟವನ್ನು ಸಮರ್ಪಕವಾಗಿ ಮತ್ತು ಗುಣಮಟ್ಟದಿಂದ ನೀಡಲಾಗುತ್ತಿದೆಯೇ ಎಂಬುದನ್ನು ಮಕ್ಕಳಿಂದಲೇ ವಿಚಾರಿಸಿ ಮಾಹಿತಿ ಪಡೆದರು.

ಸಂವಾದದ ವೇಳೆ ವಿದ್ಯಾರ್ಥಿಗಳು ಹಲವು ಮೂಲಸೌಕರ್ಯಗಳ ಕೊರತೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಶಾಲೆಯಲ್ಲಿನ ಸೌರ ವಿದ್ಯುತ್ ವ್ಯವಸ್ಥೆ ಕೆಟ್ಟುಹೋಗಿದ್ದು, ಹೊಸದಾಗಿ ಅಳವಡಿಸಬೇಕು. ಶುದ್ಧ ಕುಡಿಯುವ ನೀರಿಗಾಗಿ ಆರ್‌ಒ ಘಟಕ ಸ್ಥಾಪಿಸಬೇಕು. ಶಾಲೆಗೆ ಆವರಣ ಗೋಡೆ ಇಲ್ಲದ ಕಾರಣ ಅಭದ್ರತೆ ಉಂಟಾಗುತ್ತಿದೆ. ವಸತಿ ನಿಲಯದಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಕ್ಕಳು ಮುಂದಿಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಶಾಲೆಯ ಆವರಣ ಹಾಗೂ ಸುತ್ತಮುತ್ತಲಿನ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸುವುದು ನಮ್ಮ ಜವಾಬ್ದಾರಿಯಾಗಿದ್ದು, ಈ ಕುರಿತು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ವಸತಿ ಶಾಲೆಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಕಠಿಣ ಪರಿಶ್ರಮ ಹಾಗೂ ಓದಿನತ್ತ ಹೆಚ್ಚಿನ ಗಮನ ನೀಡಬೇಕು. ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೇರಲು ಸತತ ಪ್ರಯತ್ನ ಮಾಡಬೇಕು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಂತೆ ಅವರು ಮಕ್ಕಳಿಗೆ ಪ್ರೇರಣೆಯ ಮಾತುಗಳನ್ನಾಡಿದರು.

ಮೂಲಸೌಕರ್ಯಗಳ ಪಟ್ಟಿ ನೀಡಲು ಸೂಚನೆ

ವಸತಿ ಶಾಲೆಗಳಲ್ಲಿ ಬೆಂಚುಗಳು, ವಿದ್ಯುತ್ ದುರಸ್ತಿ, ಕಟ್ಟಡ ದುರಸ್ತಿ, ಆರ್‌ಒ ಘಟಕ ಸೇರಿದಂತೆ ಮಕ್ಕಳ ಬೇಡಿಕೆಯಂತೆ ಅಗತ್ಯವಿರುವ ಮೂಲಸೌಕರ್ಯಗಳ ಸಂಪೂರ್ಣ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಅಗತ್ಯ ಮೂಲಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನ ಅಥವಾ ಸಂಬಂಧಿಸಿದ ಇಲಾಖೆಯ ಅನುದಾನದ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಗೂಗಲ್ ಮೀಟ್ ಸಂವಾದದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಹಾಗೂ ಪ್ರಭಾರಿ ಬಿ.ಸಿ.ಎಂ. ಅಧಿಕಾರಿ ಸಂಗಮೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button