ರಾಜಕೀಯ

ಬರಪಟ್ಟಿಗೆ ಕಲಬುರಗಿ ಜಿಲ್ಲೆ ಸೇರ್ಪಡೆಗೆ ಆಗ್ರಹ: ಬಿಜೆಪಿ ಮುಖಂಡ ದೇವೇಂದ್ರ ದೇಸಾಯಿ ಕಲ್ಲೂರ್

11 ತಾಲೂಕುಗಳಲ್ಲೂ ಬರ ಪರಿಸ್ಥಿತಿ; ರೈತರ ಸಂಕಷ್ಟ ಪರಿಗಣಿಸಿ ತಕ್ಷಣ ಮರುಪರಿಶೀಲನೆ ನಡೆಸಲು ಒತ್ತಾಯ

ಕಲಬುರಗಿ, ಆ.27: ಜಿಲ್ಲೆಯ 11 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳು ಒಣಗಿವೆ. ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಹ ತೀವ್ರ ಸಂಕಷ್ಟದಲ್ಲಿದ್ದರೂ ಜಿಲ್ಲೆಯ ಯಾವುದೇ ತಾಲೂಕನ್ನು ಬರಪಟ್ಟಿಗೆ ಸೇರ್ಪಡೆ ಮಾಡದಿರುವುದು ಖಂಡನೀಯ ಎಂದು ಬಿಜೆಪಿ ಉತ್ತರ ಮೋರ್ಚಾ ನಗರಾಧ್ಯಕ್ಷ ಹಾಗೂ ಜಿಲ್ಲಾ ವಿಶ್ವಕರ್ಮ ಹೋರಾಟ ಸಮಿತಿ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ್ ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಜಲಮೂಲಗಳ ಸ್ಥಿತಿ ಹಾಗೂ ರೈತರ ಆರ್ಥಿಕ ನಷ್ಟದ ಕುರಿತು ಪುನರ್‌ಸಮೀಕ್ಷೆ ನಡೆಸಿ, ಬರಪೀಡಿತ ತಾಲೂಕುಗಳ ಪಟ್ಟಿಗೆ ಕಲಬುರಗಿ ಜಿಲ್ಲೆಯ ತಾಲೂಕುಗಳನ್ನು ಸೇರ್ಪಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳು ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಜಲಾಶಯಗಳು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಬಿತ್ತನೆ ಮಾಡಿರುವ ಬೆಳೆಗಳು ಒಣಗಿ ಹೋಗುತ್ತಿವೆ. ಮಳೆ ಕೈಕೊಟ್ಟ ಪರಿಣಾಮ ರೈತರು ಕೃಷಿಗೆ ಮಾಡಿರುವ ವೆಚ್ಚವೂ ವ್ಯರ್ಥವಾಗುವ ಆತಂಕ ಎದುರಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹಾಗೂ ಡಾ. ಅಜಯ್ ಸಿಂಗ್ ಅವರು ರೈತರ ಪರ ಕಾಳಜಿ ಕೇವಲ ಭಾಷಣಕ್ಕೆ ಸೀಮಿತವಾಗಿದ್ದು, ಕಾರ್ಯರೂಪದಲ್ಲಿ ಕಾಣುತ್ತಿಲ್ಲ ಎಂದು ಟೀಕಿಸಿದರು. ಬರದ ವಿಚಾರದಲ್ಲೂ ಸ್ಥಳೀಯ ಶಾಸಕರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕಿತ್ತು. ಆದರೆ ರೈತರ ಸಂಕಷ್ಟವನ್ನು ಕಡೆಗಣಿಸಿ ಬರಪಟ್ಟಿಯಿಂದ ಜಿಲ್ಲೆಯ 11 ತಾಲೂಕುಗಳನ್ನು ಹೊರಗಿಟ್ಟಿರುವುದು ರೈತ ವಿರೋಧಿ ನಿರ್ಧಾರವಾಗಿದೆ ಎಂದು ದೇವೇಂದ್ರ ದೇಸಾಯಿ ಕಲ್ಲೂರ್ ಆರೋಪಿಸಿದರು.

ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯ ಆತಂಕವೂ ಎದುರಾಗಿದೆ. ಸರ್ಕಾರ ಕಚೇರಿ ದಾಖಲೆಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ ರೈತರೊಂದಿಗೆ ಸೇರಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

Related Articles

Leave a Reply

Your email address will not be published. Required fields are marked *

Back to top button