
ಕಲಬುರಗಿ, ಆ.27: ರಾಜ್ಯ ಸಚಿವ ಸಂಪುಟದಲ್ಲಿ ಕೆಲ ಸಚಿವರನ್ನು ಬದಲಾವಣೆ ಮಾಡುವ ಕುರಿತು ಮುಖ್ಯಮಂತ್ರಿ ಅವರಿಂದ ಇದುವರೆಗೆ ಯಾವುದೇ ಪ್ರಸ್ತಾವನೆ ನನಗೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆ ಕುರಿತು ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಚರ್ಚಿಸಿರುವ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.
“ನಾನು ಇದೀಗ ಕಲಬುರಗಿಯಲ್ಲಿದ್ದೇನೆ. ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವ ವಿಚಾರವಿದ್ದರೆ, ಸಂಬಂಧಿಸಿದ ದಾಖಲೆಗಳು ನನ್ನ ಬಳಿಗೆ ಬರಬೇಕು. ಅವರು ಎಲ್ಲಿಗೆ ಹೋದರೂ ಕಡತ ನನ್ನ ಬಳಿಗೆ ಬರಬೇಕು. ನನ್ನ ಬಳಿ ಕಡತ ಬಂದ ನಂತರ ಈ ಕುರಿತು ನಿಮಗೆ ಮಾಹಿತಿ ನೀಡುತ್ತೇನೆ,” ಎಂದು ಖರ್ಗೆ ಹೇಳಿದರು.
ನೇಪಾಳ ಪ್ರವಾಹ: ಮೃತರಿಗೆ ಸಂತಾಪ
ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಹಲವರು ಮೃತಪಟ್ಟಿರುವ ಘಟನೆಗೆ ಖರ್ಗೆ ಸಂತಾಪ ಸೂಚಿಸಿದರು. ನೇಪಾಳ ಪ್ರವಾಹದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದ ಅವರು, ಕರ್ನಾಟಕದವರಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳ ಸಾಕಷ್ಟು ಜನರು ನೇಪಾಳದಲ್ಲಿ ಸಿಲುಕಿಕೊಂಡಿದ್ದಾರೆ ಎಂದರು.
ನೂರಾರು ಜನರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸಂಕಷ್ಟದಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ ಖರ್ಗೆ, ನೇಪಾಳದಲ್ಲಿರುವ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದರು.
“ಸಂಕಷ್ಟದಲ್ಲಿರುವ ನೇಪಾಳದ ಜನರೊಂದಿಗೆ ಭಾರತ ನಿಲ್ಲಬೇಕು. ನೇಪಾಳಕ್ಕೆ ಸಾಧ್ಯವಾದಷ್ಟು ನೆರವು ನೀಡಬೇಕು,” ಎಂದು ಖರ್ಗೆ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂಖಾನ್, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಪಾಟೀಲ ದಣ್ಣೂರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್ ಮುಖಂಡ ಪ್ರಕಾಶ್ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



