ಶಿಕ್ಷಣ

ಶಿಸ್ತು, ಸೇವಾ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಹಕಾರಿ: ಕುಲಪತಿ ಪ್ರೊ. ಶಶಿಕಾಂತ್ ಎಸ್. ತುರ್ಕೇರಿ

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಪ್ರಾಮಾಣಿಕತೆ ಹಾಗೂ ದೇಶಪ್ರೇಮ ಬೆಳೆಸಲು ತರಬೇತಿ ಅಗತ್ಯ

ಕಲಬುರಗಿ, ಆ.29- ಯುವಜನರಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಪ್ರಮುಖ ಪಾತ್ರ ವಹಿಸುತ್ತವೆ. ಸಮಾಜದಲ್ಲಿ ಉತ್ತಮವಾಗಿ ಬದುಕುವ ಜೀವನ ಮೌಲ್ಯಗಳನ್ನು ಅರಿತುಕೊಳ್ಳಲು ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿಬಿರಗಳು ಸಹಕಾರಿಯಾಗಿದ್ದು, ಶಾಲಾ-ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಪ್ರಾಮಾಣಿಕತೆ ಹಾಗೂ ದೇಶಪ್ರೇಮ ಬೆಳೆಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯ ಎಂದು ಕಲಬುರಗಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ತುರ್ಕೇರಿ ಹೇಳಿದರು.

ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಮಾಸ್ಟರ್‌, ಸ್ಕೌಟ್ ಮಾಸ್ಟರ್‌, ಪ್ಲಾಕ್ ಲೀಡರ್‌ ಹಾಗೂ ಗೈಡ್ಸ್‌ ಕ್ಯಾಪ್ಟನ್‌ಗಳ ಮೂಲ ಮತ್ತು ಮುಂದುವರಿದ ತರಬೇತಿ ಹಾಗೂ ಸಮಾಲೋಚನಾ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನಾಂಗವನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಎನ್‌ಎಸ್‌ಎಸ್‌, ಎನ್‌ಸಿಸಿ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಸೇವಾ ಮನೋಭಾವ ಬೆಳೆಸುವುದು ಅತ್ಯಂತ ಮುಖ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಮರ್ಥ್ಯವನ್ನು ದೇಶದ ಶಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಪ್ರಸ್ತುತ ಸರ್ಕಾರ ಕೃಷಿ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ವಿವಿಧ ವಿದ್ಯಾರ್ಥಿ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆ. ಎನ್‌ಎಸ್‌ಎಸ್‌ ಮತ್ತು ಎನ್‌ಸಿಸಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅರ್ಹ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳನ್ನು ನೀಡುವ ವ್ಯವಸ್ಥೆಯೂ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದೊರೆಯುತ್ತಿದ್ದು, ಅವರು ಪಠ್ಯ ಚಟುವಟಿಕೆಗಳ ಜೊತೆಗೆ ಇತರ ಸೃಜನಾತ್ಮಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕುಲಪತಿ ಸಲಹೆ ನೀಡಿದರು.

ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಮುಖ್ಯ ಅತಿಥಿಯಾಗಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಗುಲಬರ್ಗಾ ವಿಶ್ವವಿದ್ಯಾಲಯದ ಬಗ್ಗೆ ಹೆಮ್ಮೆ ಇದೆ ಎಂದರು. ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲ ಮನಸ್ಸು ಹಾಗೂ ಆದರ್ಶ ಗುಣಗಳನ್ನು ಬೆಳೆಸಲು ಶಿಕ್ಷಕರು ನಿರಂತರವಾಗಿ ಪ್ರಯತ್ನಿಸಬೇಕು. ಬಸವಣ್ಣನವರ ಜ್ಞಾನ ಪರಂಪರೆಯಿಂದ ಬೆಳೆದ ಈ ನೆಲದಲ್ಲಿ ಜ್ಞಾನ, ವಿಜ್ಞಾನ ಮತ್ತು ಆವಿಷ್ಕಾರದ ಮನೋಭಾವ ಬೆಳೆಸಿಕೊಂಡು ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ಮುನ್ನಡೆಯಬೇಕು. ವಿದ್ಯಾರ್ಥಿಗಳನ್ನು ಸಂಶೋಧನೆಯತ್ತ ಆಕರ್ಷಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಮೇಶ್ ಲಂಡನಕರ್‌, ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಚ್.ಎಸ್. ಜಂಗೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಭಾಗಗಳಿಂದ ಸುಮಾರು 153 ಸ್ಕೌಟ್ಸ್‌ ಮತ್ತು ಗೈಡ್ಸ್‌ ಪ್ರತಿನಿಧಿಗಳು ತರಬೇತಿ ಹಾಗೂ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು. ಪೀರಪ್ಪ ಹೂಗೋಂಡ ಅವರು ಸ್ವಾಗತಿಸಿದರು. ಗುರುಲಿಂಗಯ್ಯ ಹಾಗೂ ರಾಣಪ್ಪ ಸಂಗನ ಅವರು ಕಾರ್ಯಕ್ರಮ ನಿರ್ವಹಿಸಿದರು. ಜಯಪ್ರಕಾಶ್ ಕಟ್ಟಿಮನಿ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button